ನವದೆಹಲಿ:ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಶಿಕ್ಷಣ ಸಂಸ್ಥೆಗಳ ಅಧಿಕಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿ ವಿಚಾರಣೆಯನ್ನು ಮುಂದೂಡಲು ಕೋರಿದ ಅರ್ಜಿದಾರರ ಬಗ್ಗೆ ಸುಪ್ರೀಂಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಅಲ್ಲದೇ ಇಂದು ನಡೆಯಬೇಕಿದ್ದ ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ, ಈ ಹಿಂದೆ ಅರ್ಜಿದಾರರು ಪ್ರಕರಣವನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿದ್ದರು. ಕೇಸನ್ನು ತುರ್ತು ಪಟ್ಟಿಯಲ್ಲಿ ಸೇರಿಸಿ ವಿಚಾರಣೆ ನಡೆಸುತ್ತಿರುವಾಗ ಮುಂದೂಡುವಂತೆ ಕೋರುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿತು.
ಕರ್ನಾಟಕ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅರ್ಜಿಗಳ ವಿಚಾರಣೆಯನ್ನು ಮುಂದೂಡುವಂತೆ ಕೋರಿರುವ ಪತ್ರವನ್ನು ಕೋರ್ಟ್ ಮುಂದೆ ಹಾಜರುಪಡಿಸಿದಾಗ ಪೀಠ ಅಸಮಾಧಾನ ವ್ಯಕ್ತಪಡಿಸಿತು.