ನವದೆಹಲಿ :ಸಂಸತ್ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳ 12 ಸದಸ್ಯರನ್ನು ಅಮಾನತು ಮಾಡಿರುವ ವಿಚಾರ ಇಂದು ಕೂಡ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದೆ.
ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ಘೋಷಣೆಗಳನ್ನು ಕೂಗಿ ಗದ್ದಲ ಎಬ್ಬಿಸಿದವು. 12 ಸಂಸದರನ್ನು ಅಮಾನತು ಮಾಡಿರುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದವು.
ಗಲಾಟೆ ತಹಬದಿಗೆ ಬಾರದ ಹಿನ್ನೆಲೆ ಉಪ ಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. ಬಳಿಕ ಪುನಾರಂಭವಾದಾಗಲೂ ಗದ್ದಲ ಮುಂದುವರಿದಾಗ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯಸಭೆಯ 12 ಅಮಾನತುಗೊಂಡ ಸದಸ್ಯರು ಸದನಕ್ಕೆ ಬರಲು ಬಯಸಿದರೆ, ಅವರು ಪಶ್ಚಾತ್ತಾಪ ವ್ಯಕ್ತಪಡಿಸಬೇಕು ಎಂದು ಹೇಳಿದ್ದಾರೆ. ಅವರು ಧರಣಿ ಕುಳಿತುಕೊಳ್ಳಲಿ ಮಹಾತ್ಮ ಗಾಂಧಿ ಅವರಿಗೆ ಬುದ್ಧಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ
ರಾಜ್ಯಸಭೆಯ ವಿರೋಧ ಪಕ್ಷಗಳ 12 ಮಂದಿ ಸಂಸದರನ್ನು ಅಮಾನತು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಶಿವಸೇನಾ, ಟಿಎಂಸಿ, ಸಿಪಿಐ, ಸಿಪಿಎಂ ಪಕ್ಷಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸಂಸದರ ಅಮಾನತು ಬಹುಮತ ಹೊಂದಿರುವವರ ದುರಂಹಕಾರವನ್ನು ತೋರಿಸುತ್ತದೆ. ವಿರೋಧ ಪಕ್ಷದಲ್ಲಿದ್ದಾಗ ಸಂಸತ್ ಕಲಾಪಕ್ಕೂ ಅಡ್ಡಿಪಡಿಸುತ್ತಿದ್ದರು. ನಮಗೆ ನ್ಯಾಯ ಸಿಗುವವರೆಗೂ ಧರಣಿ ಮುಂದುವರಿಸುತ್ತೇವೆ ಎಂದು ಅಮಾನತುಗೊಂಡಿರುವ ಟಿಎಂಸಿ ಸಂಸದೆ ಡೋಲಾ ಸೇನ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.