ಹೈದರಾಬಾದ್:ತೆಲಂಗಾಣದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಸಜ್ಜಾಗಿದೆ. ಆದರೆ ಇದೇ ಸಮಯದಲ್ಲಿ ಸಿಎಲ್‌ಪಿ ನಾಯಕ ಯಾರು ಎಂಬ ಕುತೂಹಲ ಮುಂದುವರೆದಿದೆ. ಇನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಇನ್ನೂ ಸ್ಪಷ್ಟ ಹೇಳಿಕೆ ನೀಡಿಲ್ಲ.
ಹೈದರಾಬಾದ್‌ನ ಹೋಟೆಲ್‌ನಲ್ಲಿ ಸಭೆ ನಡೆಸಿದ ಕಾಂಗ್ರೆಸ್‌ನ ಎಲ್ಲ ಶಾಸಕರು ಏಕ ವಾಕ್ಯದ ನಿರ್ಣಯ ಅಂಗೀಕರಿಸಿದ್ದು, ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲಿಕಾರ್ಜುನ್ ಖರ್ಗೆ ಅವರಿಗೆ ನೀಡಲಾಗಿದ್ದು, ಅವರೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇದಕ್ಕೆ ಹಿರಿಯ ಮುಖಂಡ ಹಾಗೂ ಶಾಸಕ ಬ್ಯಾಹಟ್ಟಿ ವಿಕ್ರಮಾರ್ಕ, ಶಾಸಕಿ ಸೀತಕ್ಕ ಮತ್ತಿತರ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈಗ ಚೆಂಡು ಹೈಕಮಾಂಡ್ ಅಂಗಳದಲ್ಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಿದೆ. ಹೀಗಾಗಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸ್ಪಷ್ಟತೆ ಇಲ್ಲ. ನೂತನ ಸಿಎಂ ಆಯ್ಕೆ ಬಗ್ಗೆ ಸ್ಪಷ್ಟತೆ ಇಲ್ಲದ ಕಾರಣ ಸೋಮವಾರ ನಡೆಯಬೇಕಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಂದಕ್ಕೆ ಹೋಗಿದೆ.