ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯರ್ತರ ಮೇಲೆ ನಡೆಯುತ್ತಿರುವ ಹಲ್ಲೆ ವಿಚಾರವಾಗಿ ಬಿಜೆಪಿ ಎಂಎಲ್ಎ ಸುವೇಂದು ಅಧಿಕಾರಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.
ಸೋಮವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಬಂದಿಳಿದ ಸುವೇಂದು ಅಧಿಕಾರಿ ಮಂಗಳವಾರ ಹಲವು ಮಂದಿ ಕೇಂದ್ರ ಸಚಿವರುಗಳು ಮತ್ತು ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ. ನಾಳೆ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರ, ಸುವೇಂದು ಅಧಿಕಾರಿಯು ಮತದಾನದ ನಂತರದ ಹಿಂಸಾಚಾರದ ಕುರಿತಾದ ವರದಿಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರಿಗೆ ಸಲ್ಲಿಸಿದ್ದರು. ಭಾರತೀಯ ಜನತಾ ಪಕ್ಷ ತನ್ನ ಪಕ್ಷದ ಹಲವಾರು ಕಾರ್ಯಕರ್ತರು ಪಶ್ಚಿಮ ಬಂಗಾಳದ ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಆರೋಪಿಸಿದೆ. ಆದ್ರೆ ಈ ಆರೋಪಗಳನ್ನು ಆಡಳಿತರೂಢ ಪಕ್ಷ ತೃಣಮೂಲ ಕಾಂಗ್ರೆಸ್ ತಳ್ಳಿ ಹಾಕಿದೆ.
ರಾಜ್ಯದಲ್ಲಿ ಮೇ 2 ರಂದು ಚುನಾವಣಾ ನಂತರದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಮೇ 25 ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.