ಕೊಯಮತ್ತೂರು(ತಮಿಳುನಾಡು):ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದೆ. ಆದರೆ, ಯಾವುದೇ ರೀತಿಯ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಎನ್ಐಎ ಅಧಿಕಾರಿಗಳು ತಮಿಳುನಾಡಿನ ವಿವಿಧ ಸ್ಥಳಗಳಲ್ಲಿರುವ ಪಿಎಫ್ಐ ಕಚೇರಿಗಳ ಮೇಲೆ ದಾಳಿ ನಡೆಸಿ, ಅನೇಕ ಕಾರ್ಯಕರ್ತರ ಬಂಧನ ಮಾಡಿರುವ ಬೆನ್ನಲ್ಲೇ ಈ ಘಟನೆ ನಡೆದಿದೆ.
ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಪಕ್ಷದ ಕಾರ್ಯಕರ್ತರು ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಇದರ ಜೊತೆಗೆ ಹಿಂದೂ ಸಂಘಟನೆಯ ಪದಾಧಿಕಾರಿಯೊಬ್ಬರ ಒಡೆತನದ ಮತ್ತೊಂದು ವಾಣಿಜ್ಯ ಸಂಸ್ಥೆ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಘಟನೆ ಬೆನ್ನಲ್ಲೇ ಉನ್ನತಾಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಪರಿಶೀಲನೆ ನಡೆಸಿದರು. ಪ್ರಕರಣದಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ನಿನ್ನೆ ತಡರಾತ್ರಿ ಪ್ರತಿಭಟನೆ ನಡೆಸಿದರು. ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.