ಹೈದರಾಬಾದ್/ ತೆಲಂಗಾಣ: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ರಾಜ್ಯದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳ ಸಾರ್ವಜನಿಕ ಆಚರಣೆಗೆ ಅವಕಾಶ ನೀಡದಿರಲು ತೆಲಂಗಾಣ ಸರ್ಕಾರ ನಿರ್ಧರಿಸಿದ್ದು ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ತೆಲಂಗಾಣ; ಧಾರ್ಮಿಕ ಕಾರ್ಯಕ್ರಮಗಳ ಸಾರ್ವಜನಿಕ ಆಚರಣೆಗೆ ನಿರ್ಬಂಧ
ಕೊರೊನಾ ಎರಡನೇ ಅಲೆ ಶುರುವಾದ ಬೆನ್ನಲ್ಲೇ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ತೆಲಂಗಾಣ ರಾಜ್ಯ ಮುಂದಾಗಿದ್ದು, ಮುಂಬರುವ ಯಾವುದೇ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಕಳೆದ ಕೆಲವು ದಿನಗಳಿಂದ ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಏಪ್ರಿಲ್ 30 ರವರೆಗೆ ಬರಲಿರುವ ಹೋಳಿ, ಯುಗಾದಿ, ರಾಮನವಮಿ, ಮಹಾವೀರ ಜಯಂತಿ, ಗುಡ್ ಫ್ರೈಡೇ, ರಂಜಾನ್ ಮುಂತಾದ ಹಬ್ಬಗಳ ಆಚರಣೆಗೆ ನಿಬಂಧನೆ ಹೇರಲಾಗಿದೆ. ಈ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳು, ಮೈದಾನಗಳು, ಉದ್ಯಾನವನಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿನ ಧಾರ್ಮಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಯಾವುದೇ ರ್ಯಾಲಿಗಳು, ಮೆರವಣಿಗೆಗಳು, ಸಾರ್ವಜನಿಕ ಆಚರಣೆಗಳು, ಕೂಟಗಳು, ಸಭೆಗಳು ಇತ್ಯಾದಿಗಳನ್ನು ನಡೆಸಲು ಅನುಮತಿಸಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಒಂದು ವೇಳೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ರೆ ಕಾನೂನು ಕ್ರಮ ಜರುಗಿಸುವಂತೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರದ ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಕಮಿಷನರ್ಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶಿಸಲಾಗಿದೆ.