ನವದೆಹಲಿ: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ವಿವಾದಾತ್ಮಕ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ್ದಕ್ಕಾಗಿ ಭಾರತದಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಮೇಲೆ ಸಂಪೂರ್ಣ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅರ್ಜಿಯು ಸಂಪೂರ್ಣ ತಪ್ಪು ಗ್ರಹಿಕೆಯಿಂದ ಕೂಡಿದೆ ಮತ್ತು ವಿಚಾರಣೆಗೆ ಅರ್ಹವಾಗಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂ.ಎಂ.ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಮತ್ತು ರೈತ ಬೀರೇಂದ್ರ ಕುಮಾರ್ ಸಿಂಗ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ರಿಟ್ ಅರ್ಜಿಯು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲ್ಪಟ್ಟಿದೆ ಮತ್ತು ಯಾವುದೇ ಅರ್ಹತೆಯನ್ನು ಹೊಂದಿಲ್ಲ ಮತ್ತು ಅದೇ ಕಾರಣಕ್ಕೆ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಪೀಠ ತಿಳಿಸಿದೆ.
ಆರಂಭದಲ್ಲಿ ನ್ಯಾಯಮೂರ್ತಿ ಖನ್ನಾ ಅವರು, ಇದು ಸಂಪೂರ್ಣವಾಗಿ ತಪ್ಪು ಕಲ್ಪನೆಯಿಂದ ಕೂಡಿದೆ, ಇದು ಯಾವುದೇ ಅರ್ಹತೆ ಪಡೆದಿಲ್ಲ. ನೀವು ಇದನ್ನು ವಾದ ಮಾಡುವುದಾದರೂ ಹೇಗೆ? ಒಟ್ಟಾರೆ ಇದು ಸಂಪೂರ್ಣವಾಗಿ ತಪ್ಪು ಕಲ್ಪನೆಯಿಂದ ಕೂಡಿದೆ ಎಂದು ನಾನು ಭಾವಿಸುತ್ತೇನೆ ಎಂದರು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿಂಕಿ ಆನಂದ್, ಸಾಕ್ಷ್ಯಚಿತ್ರ ಹೊರಬಿದ್ದ ಹಿನ್ನೆಲೆಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದರು. ಇಂದು ಭಾರತೀಯರೊಬ್ಬರು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಿಯಾಗಿರುವ ಸಂದರ್ಭವನ್ನು ಪರಿಗಣಿಸುವಂತೆ ಕೋರಿದರು.
ಭಾರತವು ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ ಮತ್ತು ಭಾರತ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದರಿಂದ ದೇಶ ಉನ್ನತ ಸ್ಥಾನದಲ್ಲಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸಾಕ್ಷ್ಯಚಿತ್ರವು ಇದಕ್ಕೆ ಕುಂದು ತರುತ್ತದೆ ಎಂದು ನೀವು ಭಾವಿಸುತ್ತೀರಾ ಎಂದು ಕೇಳಿತು. ನೀವು ಕೇಳುತ್ತಿರುವುದಾದರೂ ಏನು? ನಾವು ಸಂಪೂರ್ಣ ಸೆನ್ಸರ್ಶಿಪ್ ಹಾಕಬೇಕೆಂದು ನೀವು ಬಯಸುತ್ತೀರಾ ಎಂದು ಪ್ರಶ್ನಿಸಿತು.