ನವದೆಹಲಿ: ಒಂದು ಡೋಸ್ ಲಸಿಕೆ ಪಡೆದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಕಾಲೇಜುಗಳಿಗೆ ಹಾಜರಾಗಬಹುದು ಎಂದು ಜುಲೈ 16, 2021 ರಂದು ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ವಿಚಾರವಾಗಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. ಈ ಸಂಬಂಧ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.
ನಾವು ಇದಕ್ಕೆ ಸಪೋರ್ಟ್ ಮಾಡುವುದಿಲ್ಲ. ನೀವು ಲಸಿಕೆಯನ್ನು ತೆಗೆದುಕೊಳ್ಳಿ. ಇದರಲ್ಲಿ ರಾಷ್ಟ್ರದ ಹಿತಾಸಕ್ತಿಇದೆ ಎಂದು ಕೋರ್ಟ್ ಹೇಳಿದೆ. ಈ ಮೂಲಕ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ಸಚಿನ್ ಶಂಕರ್ ಮಗದುಮ್ ಅವರ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಡಿಸೆಂಬರ್ 4, 2021 ರಂದು ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಇಂದು ಸುಪ್ರೀಂಕೋರ್ಟ್‌ನಲ್ಲಿ ಏನಾಯಿತು?ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಂಡಾಗ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಡಿಸೆಂಬರ್ 4, 2021 ರಂದು ನೀಡಿದ ಆದೇಶವನ್ನು ಅಂಗೀಕರಿಸಿ, ಅರ್ಜಿದಾರರ ಪರ ಹಾಜರಾದ ವಕೀಲ ಅನಾಸ್ ತನ್ವೀರ್ ಅವರಿಗೆ ಲಸಿಕೆ ಹಾಕಿಸಿಕೊಳ್ಳಲು ಏನು ತೊಂದರೆ ಎಂದು ಪ್ರಶ್ನಿಸಿದರು.