ಪಣಜಿ,ಗೋವಾ :ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ಮೂವರು ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗೋವಾದ ಪಣಜಿಯಲ್ಲಿರುವ ಕಚೇರಿಯಲ್ಲಿ ಈ ಮೂವರೂ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ದೆಹಲಿಯ ಆದಾಯ ತೆರಿಗೆ ಇನ್ಸ್‌ಪೆಕ್ಟರ್ ಮನೀಂದರ್ ಅತ್ರಿ, ರಾಜಸ್ಥಾನದ ಆದಿತ್ಯ ವರ್ಮಾ ಮತ್ತು ಬೆಂಗಳೂರಿನ ದೀಪಕ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಲ್ಲಾ ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 354 (A), 354 (D), 509 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ. ಆರೋಪಿಗಳನ್ನು ಬಂಧಿಸಬೇಕಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ನಿಖಿಲ್ ಪಾಲ್ಯೇಕರ್ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.
ಆರೋಪಿಗಳು ಫೆಬ್ರವರಿ 2022ರಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಇಬ್ಬರು ಆರೋಪಿಗಳು ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆಕೆಯ ಮೊಬೈಲ್ನಿಂದ ವಾಟ್ಸ್‌ಆ್ಯಪ್ ಸಂದೇಶಗಳನ್ನು ಅಳಿಸಿ ಹಾಕುವಂತೆ ಬೆದರಿಕೆ ಹಾಕಿದ್ದಾರೆ. ಮೂರನೇ ವ್ಯಕ್ತಿಯೂ ಆಕೆಗೆ ಮಾನಸಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಪಣಜಿ ಪೊಲೀಸರು ಆದಾಯ ತೆರಿಗೆ ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ಮುಂದಾಗಿದ್ದಾರೆ. ಈವರೆಗೆ ಒಬ್ಬ ಮಹಿಳೆಯಿಂದ ಮಾತ್ರ ದೂರು ಸ್ವೀಕರಿಸಲಾಗಿದೆ. ಬೇರೆ ಯಾರಾದರೂ ಇಂತಹ ದೂರುಗಳನ್ನು ನೀಡಿದರೆ, ಆ ಕುರಿತೂ ತನಿಖೆ ಮಾಡುತ್ತೇವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಅತ್ಯಾಚಾರಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಹರಿತ ಆಯುಧದಿಂದ ವಿಧವೆ ಕಣ್ಣಿಗೆ ಇರಿದ ಕಿರಾತಕ!