ಕತಿಹಾರ್(ಬಿಹಾರ) :ಬಿಹಾರ ಸರ್ಕಾರದ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಪೊಲೀಸರ ಲಾಠಿ ಚಾರ್ಜ್ಗೆ ಬಿಜೆಪಿ ನಾಯಕ ಮೃತಪಟ್ಟ ಘಟನೆ ನಡೆದಿತ್ತು. ಇದು ಮಾಸುವ ಮುನ್ನವೇ, ಇಂದು ಕತಿಹಾರ್ ಜಿಲ್ಲೆಯಲ್ಲಿ ನಿಯಮಿತ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದಿದ್ದು, ಪೊಲೀಸರ ಗುಂಡೇಟಿಗೆ ಮೂವರು ಬಲಿಯಾಗಿದ್ದಾರೆ.
ಕತಿಹಾರ್‌ನಲ್ಲಿ ಅನಿಯಮಿತ ವಿದ್ಯುತ್ ಪೂರೈಕೆಯ ವಿರುದ್ಧ ಜನರು ಬುಧವಾರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಆಕ್ರೋಶ ತಡೆಯಲು ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಗುಂಡೇಟಿಗೆ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಘಟನೆಯ ವಿವರ:ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅನಿಯಮಿತ ವಿದ್ಯುತ್ ಪೂರೈಕೆಯನ್ನು ವಿರೋಧಿಸಿ ವಿದ್ಯುತ್ ಇಲಾಖೆ ಕಚೇರಿಯ ಮುಂದೆ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಮತ್ತು ಜನರ ಮಧ್ಯೆ ಸಂಘರ್ಷ ಏರ್ಪಟ್ಟು ಪೊಲೀಸರು ಜನರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಐವರಿಗೆ ಗುಂಡು ತಗುಲಿದೆ. ಇದರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ತೀವ್ರ ರಕ್ತಸ್ರಾವದಿಂದಾಗಿ ಇಬ್ಬರು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.
ಸಾವನ್ನಪ್ಪಿದ ಮೂವರಲ್ಲಿ ಬಾಸಲ್ ಗ್ರಾಮದ ನಿವಾಸಿ ಮೊಹಮ್ಮದ್ ಖುರ್ಷಿದ್ (35) ಮತ್ತು ಚಾಪಖೋಡ್ ಪಂಚಾಯಿತಿಯ ನಿಯಾಜ್ ಆಲಂ (32) ಎಂದು ಗುರುತಿಸಲಾಗಿದ್ದು, ಇನ್ನೊಬ್ಬಾತನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಇದೇ ವೇಳೆ, ನಡೆದ ಲಾಠಿ ಚಾರ್ಜ್‌ನಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.