ನವದೆಹಲಿ :ಸೋಮವಾರದಿಂದ ಸಂಸತ್ನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಬಹುಕಾಲದಿಂದಲೂ ಬಾಕಿ ಉಳಿಸಿಕೊಂಡಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಂಡಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೇಡಿಕೆ ಇಟ್ಟಿದೆ.
ರಾಜ್ಯಸಭೆಯ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಈ ಕುರಿತು ಟ್ವೀಟ್ ಮಾಡಿದ್ದು, ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಬೇಕೆಂದು ಒತ್ತಾಯಿಸಿದ್ದಾರೆ. 2014ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ ಈ ಭರವಸೆ ನೀಡಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸೋಮವಾರದಿಂದ ಸಂಸತ್ತಿನ ಅಧಿವೇಶನ ಆರಂಭವಾಗಲಿದೆ. ಭಾನುವಾರ ಪ್ರಧಾನಿ ಹಾಗೂ ಇತರೆ ಸಚಿವರು ಎಲ್ಲಾ ಪಕ್ಷಗಳ ಸಂಸದೀಯ ನಾಯಕರನ್ನು ಭೇಟಿ ಮಾಡಲಿದ್ದಾರೆ.
ಈ ವೇಳೆ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲು ತೃಣಮೂಲ ಕಾಂಗ್ರೆಸ್ ಒತ್ತಾಯಿಸಲಿದೆ. ಬಿಜೆಪಿ 2014ರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಇನ್ನೂ ಈಡೇರಿಸಿಲ್ಲ ಎಂದು ಡೆರೆಕ್ ಓಬ್ರಿಯಾನ್ ಟ್ವೀಟ್ ಮಾಡಿದ್ದಾರೆ.
ಕೆಲವು ವರ್ಷಗಳಿಂದ ಮಹಿಳಾ ಮೀಸಲಾತಿ ಮಸೂದೆ ಭಾರಿ ಚರ್ಚೆಯಲ್ಲಿದೆ. ಲೋಕಸಭೆ ಮತ್ತು ಎಲ್ಲಾ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಸಲುವಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುವ ಅವಕಾಶವನ್ನು ಈ ಮಸೂದೆ ಕಲ್ಪಿಸಲಿದೆ.
ಅಧಿವೇಶನದಲ್ಲಿ ಪೆಗಾಸಸ್ ಗೂಢಚಾರಿಕೆ, ಅಗತ್ಯವಸ್ತುಗಳ ಬೆಲೆ ಏರಿಕೆ ಮತ್ತು ನಿರುದ್ಯೋಗ ಮುಂತಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಬೇಕೆಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸರ್ವಪಕ್ಷ ಸಭೆಯಲ್ಲಿ ಪಟ್ಟು ಹಿಡಿದಿವೆ ಎಂದು ಮೂಲಗಳು ಮಾಹಿತಿ ನೀಡಿವೆ.
ಇದನ್ನೂ ಓದಿ:Winter Session: ಪೆಗಾಸಸ್, ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಚರ್ಚೆಗೆ ಸರ್ವಪಕ್ಷ ಸಭೆಯಲ್ಲಿ ಒತ್ತಾಯ