ಅಗರ್ತಲಾ: ತ್ರಿಪುರಾ ವಿಧಾನಸಭೆ ಚುನಾವಣೆ 2023ರ ಮತದಾನ ಆರಂಭವಾಗಿದೆ. ರಾಜ್ಯದ 60 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಶಾಂತಿಯುತ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿಧಾನಸಭೆ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಮಾಹಿತಿ ಪ್ರಕಾರ ಈ ಬಾರಿಯ ಚುನಾವಣೆಯಲ್ಲಿ ಒಟ್ಟು 259 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ 28 ಲಕ್ಷಕ್ಕೂ ಹೆಚ್ಚು ಮತದಾರರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತಾರೆ. ಮಾರ್ಚ್ 2 ರಂದು ಚುನಾವಣಾ ಫಲಿತಾಂಶ ಹೊರ ಬರಲಿದೆ.
ಮತದಾನ ಹಿನ್ನೆಲೆ ರಾಜ್ಯದಲ್ಲಿ 3 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಸುಮಾರು 1100 ಸೂಕ್ಷ್ಮ ಮತಗಟ್ಟೆಗಳು ಮತ್ತು 28 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು 31 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ 25 ಸಾವಿರ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ. ಈ ಹಿಂದೆ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದರು. ಚುನಾವಣಾ ಆಯೋಗದ ಪ್ರಕಾರ ಈ ಬಾರಿ 13 ಲಕ್ಷಕ್ಕೂ ಹೆಚ್ಚು ಮಹಿಳಾ ಮತದಾರರಿದ್ದಾರೆ.
ಸಿಎಂ ಮಾಣಿಕ್ ಸಹಾ ಅವರು ಭಾರತೀಯ ಜನತಾ ಪಕ್ಷದ ಪರವಾಗಿ ಬರ್ದೋವಲಿಯಿಂದ ಕಣದಲ್ಲಿದ್ದಾರೆ. ಸಿಪಿಐ(ಎಂ) ನಿಂದ ಜಿತೇಂದ್ರ ಚೌಧರಿ ಅವರು ಸಬ್ರೂಮ್ ವಿಧಾನಸಭಾ ಕ್ಷೇತ್ರದಿಂದ ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ. 60 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 55 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಮಿತ್ರಪಕ್ಷಗಳೊಂದಿಗೆ 13 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷದ 28 ಅಭ್ಯರ್ಥಿಗಳೂ ಕಣದಲ್ಲಿದ್ದಾರೆ. 58 ಸ್ವತಂತ್ರ ಅಭ್ಯರ್ಥಿಗಳು ಸಹ ಈ ವಿಧಾನಸಭಾ ಚುನಾವಣಾ ಋತುವಿನಲ್ಲಿ ಭಾರಿ ಪ್ರಯತ್ನದೊಂದಿಗೆ ಸ್ಪರ್ಧಿಸುತ್ತಿದ್ದಾರೆ.