ನವದೆಹಲಿ: ಸತ್ಯಕ್ಕೆ ಯಾವಾಗಲೂ ಜಯ ಸಿಗುತ್ತದೆ. ನನ್ನ ಮಾರ್ಗ, ನನ್ನ ಕೆಲಸ ಏನೆಂಬ ಬಗ್ಗೆ ನನಗೆ ಸ್ಪಷ್ಟತೆ ಇದೆ. ನನ್ನನ್ನು ಬೆಂಬಲಿಸಿದವರಿಗೆ ಧನ್ಯವಾದ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮೋದಿ ಉಪನಾಮ ಕುರಿತು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದ ಬೆನ್ನಲ್ಲೇ ರಾಹುಲ್ ಈ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಸತ್ಯ ಯಾವತ್ತಿದ್ದರೂ ಜಯಗಳಿಸುತ್ತದೆ. ಇವತ್ತಲ್ಲದಿದ್ದರೆ ನಾಳೆ ಅಥವಾ ಅದರ ಮರು ದಿನವಾದರೂ ಜಯ ಸಿಗುತ್ತದೆ ಎಂದು ಪ್ರತಿಕ್ರಿಯಿಸಿದರು.
ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಈ ಗೆಲುವು ಕೇವಲ ರಾಹುಲ್ ಗಾಂಧಿ ಅವರದ್ದಲ್ಲ. ದೇಶದ ಜನತೆ ಮತ್ತು ಪ್ರಜಾಪ್ರಭುತ್ವಕ್ಕೆ ಸಂದ ಗೆಲುವು. ಸಂವಿಧಾನ ಜೀವಂತವಾಗಿದ್ದರೆ ನ್ಯಾಯವನ್ನು ಪಡೆಯಬಹುದು ಎಂಬುದಕ್ಕೆ ಉದಾಹರಣೆ. ಇದು ಸಾಮಾನ್ಯ ಜನರ ಮತ್ತು ಸಾಂವಿಧಾನಿಕ ತತ್ವಗಳ ವಿಜಯವಾಗಿದೆ ಎಂದು ಹೇಳಿದರು.
ಇದೇ ವೇಳೆ, ರಾಹುಲ್ ಗಾಂಧಿ ವಿರುದ್ಧ ತೀರ್ಪು ಬಂದ ಕೇವಲ 24 ಗಂಟೆಗಳೊಳಗೆ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿತ್ತು. ಈಗ ಅದನ್ನು ಪುನಃ ಸ್ಥಾಪಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡಬೇಕಿದೆ ಎಂದರು.
ಮೈತ್ರಿಕೂಟದ ನಾಯಕರ ಪ್ರತಿಕ್ರಿಯೆ: ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ನ 'ಇಂಡಿಯಾ' ಮೈತ್ರಿಕೂಟ ಪಕ್ಷಗಳ ನಾಯಕರು ಸ್ವಾಗತಿಸಿದ್ದಾರೆ. ''ರಾಹುಲ್ ಗಾಂಧಿ ಅವರ ಸಂಸದ ಸ್ಥಾನದ ಸುದ್ದಿಯಿಂದ ನನಗೆ ಸಂತೋಷವಾಗಿದೆ. ಇದು ನಮ್ಮ ಮಾತೃಭೂಮಿಗಾಗಿ ಒಗ್ಗಟ್ಟಿನಿಂದ ಹೋರಾಡಿ ಗೆಲ್ಲುವ ಇಂಡಿಯಾ ಮೈತ್ರಿಯ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತದೆ. ಇದು ನ್ಯಾಯಾಂಗದ ಗೆಲುವು'' ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, "ರಾಹುಲ್ ಗಾಂಧಿಯವರ ವಿರುದ್ಧದ ಅನ್ಯಾಯದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಭಾರತೀಯ ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಬಲಪಡಿಸುತ್ತದೆ. ರಾಹುಲ್ ಗಾಂಧಿ ಅವರಿಗೆ ಮತ್ತು ವಯನಾಡು ಜನರಿಗೆ ಅಭಿನಂದನೆಗಳು" ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ದೃಢಪಡಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ. "ನ್ಯಾಯದ ಮೇಲುಗೈ, ವಯನಾಡು ರಾಹುಲ್ ಗಾಂಧಿಯನ್ನು ಉಳಿಸಿಕೊಂಡಿದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಆತ್ಮೀಯ ಸಹೋದರ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸ್ವಾಗತಿಸುತ್ತೇವೆ" ಎಂದು ಸ್ಟಾಲಿನ್ ಹೇಳಿದ್ದಾರೆ.
ವಯನಾಡಿನಲ್ಲಿ ಕಾರ್ಯಕರ್ತರ ಸಂತಸ: ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ದೆಹಲಿ ಕಾಂಗ್ರೆಸ್ ಕಚೇರಿ ಸೇರಿ ಹಲವೆಡೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಅಲ್ಲದೇ, ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದ ಕೇರಳದಲ್ಲಿ ವಯನಾಡಿನಲ್ಲಿ ಪಕ್ಷದ ಕಾರ್ಯಕರ್ತರು ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಸಂತಸ ವ್ಯಕ್ತಪಡಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ವಯನಾಡು ಕ್ಷೇತ್ರದಿಂದ ಸಂಸದರಾಗಿ ರಾಹುಲ್ ಆಯ್ಕೆಯಾಗಿದ್ದರು.
ಇದನ್ನೂ ಓದಿ:Modi surname case: ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ