ಲಖನೌ: ಉತ್ತರಪ್ರದೇಶದ ಬರೇಲಿಯಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ನಾಯಕರೊಬ್ಬರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದ ಆರೋಪದ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮತ್ತೊಬ್ಬ ವ್ಯಕ್ತಿಯ ಮೇಲೂ ಪ್ರಕರಣ ದಾಖಲಿಸಲಾಗಿದೆ.
ದಿನದಿನಕ್ಕೂ ಈ ಪ್ರಕರಣ ದೇಶಾದ್ಯಂತ ತೀವ್ರ ಉದ್ವಿಗ್ನ ಪರಿಸ್ಥಿತಿಯನ್ನು ನಿರ್ಮಾಣ ಮಾಡುತ್ತಾ ಸಾಗಿದಂತೆ ತೋರುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸೇರಿ ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಪ್ರತಿ ಪೂಜಾ ಸ್ಥಳದ ಬಳಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕೋಮು ಸೌಹಾರ್ದತೆ ಕಾಪಾಡಲು ಶಾಂತಿ ಸಂದೇಶ ಸಾರಲು ಸ್ಥಳೀಯ ಮುಖಂಡರಿಗೆ ಸೂಚಿಸಲಾಗಿದೆ.
ಪ್ರೇಮ್ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿರುವ ಆರೋಪಿಗಳಲ್ಲಿ ಒಬ್ಬನಾಗಿರುವ ಕುಲದೀಪ್ ಕುಮಾರ್ ಎಂಬಾತ ಹಿಸ್ಟರಿ ಶೀಟರ್ ಆಗಿದ್ದು, ಪೊಲೀಸರು ಹಲವು ಸಂದರ್ಭಗಳಲ್ಲಿ ಈ ಆರೋಪಿಯನ್ನು ಬಂಧಿಸಿದ್ದಾರೆ. ಈ ವ್ಯಕ್ತಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಒಂದನ್ನು ಶೇರ್ ಮಾಡಿ, ಶಾಂತಿ ಕದಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.