ಕುಪ್ವಾರ ( ಜಮ್ಮು ಮತ್ತು ಕಾಶ್ಮೀರ): ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ನುಸುಳುಕೋರರನ್ನು ಹತ್ಯೆ ಮಾಡಿರುವುದಾಗಿ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯಲ್ಲಿ ಒಳ ನುಸುಳಲು ಯತ್ನಿಸುತ್ತಿದ್ದ ಇಬ್ಬರು ನುಸುಳುಕೋರರು ಭದ್ರತಾ ಸಿಬ್ಬಂದಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎರಡು ಎಕೆ ರೈಫಲ್ಸ್, ನಾಲ್ಕು ಮ್ಯಾಗಜಿನ್, 90 ಗುಂಡು, ಒಂದು ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕುಪ್ವಾರ ಪೊಲೀಸ್ ಅಧಿಕಾರಿಗಳು, ಇಲ್ಲಿನ ಕುಮ್ಕಾಡಿ ಏರಿಯಾದ ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ನುಸುಳುಕೋರರು ಒಳ ನುಗ್ಗುತ್ತಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭಿಸಿತ್ತು. ಈ ಸಂಬಂಧ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ನುಸುಳುಕೋರರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಡಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜೊತೆಗೆ, ಎನ್ಕೌಂಟರ್ ನಡೆದ ಸ್ಥಳದಿಂದ ಎರಡು ಎಕೆ ರೈಫಲ್ಸ್, ನಾಲ್ಕು ಮ್ಯಾಗಜಿನ್, 90 ಗುಂಡು, ಒಂದು ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ. ಜೊತೆಗೆ ನುಸುಳುಕೋರರ ಬಳಿಯಿದ್ದ ಪಾಕಿಸ್ತಾನದ ಕರೆನ್ಸಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.