ಕುಲ್ಗಾಮ್ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಕುಲ್ಗಾಮ್ ಜಿಲ್ಲೆಯ ನವಪುರ ಮೀರ್ ಬಜಾರ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದೆ. ಇಲ್ಲಿನ ಉಗ್ರರು ಅಡಗಿದ್ದಾರೆ ಎಂಬ ಸುಳಿವಿನ ಮೇರೆಗೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಈ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಭದ್ರತಾ ಪಡೆಗಳತ್ತ ಮನಬಂದಂತೆ ಗುಂಡು ಹಾರಿಸಿ ಪರಾರಿಯಾಗಲು ಪ್ರಯತ್ನಿಸಿದರು ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ.