ಉದಯಪುರ (ರಾಜಸ್ಥಾನ): ನೆರೆ ಮನೆಯ ವ್ಯಕ್ತಿಯೋರ್ವ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ತುಂಡು ತುಂಡಾಗಿ ಕತ್ತರಿಸಿ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಅಮಾನವೀಯ ಘಟನೆ ಉದಯಪುರದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಸಂತ್ರಸ್ತ ಬಾಲಕಿಯ ನೆರೆಮನೆಯ ನಿವಾಸಿ ಕಮಲೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಿರ್ಜನ ಪ್ರದೇಶದಲ್ಲಿ ಬಿಸಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಮಾಹಿತಿ ನೀಡಿದ ಉದಯ್‌ಪುರ ಎಸ್‌ಪಿ ವಿಕಾಸ್ ಶರ್ಮಾ, ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಯು ತನ್ನ ಮನೆಯಲ್ಲಿ ಒಬ್ಬನೇ ವಿಡಿಯೋ ಗೇಮ್ ಆಡುತ್ತಿದ್ದನು. ಈ ವೇಳೆ ಮನೆಯ ಹೊರಗಡೆ ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ತನ್ನ ಮನೆಯಲ್ಲೇ ಬಾಲಕಿಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಂತರ ನಿರ್ಜನ ಪ್ರದೇಶದಲ್ಲಿ ಬಿಸಾಡಿದ್ದಾನೆ. ಈ ಸಂದರ್ಭದಲ್ಲಿ ಆರೋಪಿಯ ಪೋಷಕರು ಮನೆಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ. ಇನ್ನು ಈ ವಿಡಿಯೋ ಗೇಮ್ಗೂ ಮತ್ತು ಈತನ ಕೃತ್ಯಕ್ಕೂ ಏನಾದರೂ ಸಂಬಂಧ ಇದೆಯಾ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.