ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಈ ಸಂದರ್ಭದಲ್ಲಿ ಇಂಡೋ - ಪೆಸಿಫಿಕ್ ಪ್ರದೇಶದಲ್ಲಿನ ಬೆಳವಣಿಗೆಗಳ ಕುರಿತು ಚರ್ಚಿಸುವ ಉದ್ದೇಶದಿಂದ ಕ್ವಾಡ್ - ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕ ದೇಶಗಳ ನಾಯಕರು ಗುರುವಾರದಂದು ವರ್ಚುಯಲ್ ಸಭೆ ನಡೆಸಿದ್ದಾರೆ. ಉಕ್ರೇನ್ ಮೇಲಿನ ರಷ್ಯಾ ಮಿಲಿಟರಿ ಕಾರ್ಯಾಚರಣೆ ಕುರಿತು ಇದೇ ವೇಳೆ ಚರ್ಚಿಸಿದ್ದಾರೆ.
ಕ್ವಾಡ್ ಲೀಡರ್‌ಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯನ್ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಭಾಗವಹಿಸಿದ್ದರು. ಈ ಸಭೆಯಲ್ಲಿ ಜಾಗತಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಪ್ರಯತ್ನ ಮಾಡಲಾಗಿದೆ.
ಉಕ್ರೇನ್ ಮೇಲಿನ ರಷ್ಯಾದ ದಾಳಿಯಿಂದ ಉಂಟಾಗಿರುವ ಪರಿಸ್ಥಿತಿ, ಭವಿಷ್ಯ ಮತ್ತು ಮಾನವೀಯತೆ ನೆರವಿನ ಬಗ್ಗೆಯೂ ಚರ್ಚಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಎರಡೂ ದೇಶಗಳು ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳುವ ಅಗತ್ಯತೆಯ ಬಗ್ಗೆ ಒತ್ತಿ ಹೇಳಿದರು.