ಚೆನ್ನೈ: ಇಂದು ಬೆಳಗಿನ ಜಾವ ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದ ಕೂಡಲೇ ಮಾಂಬಲಂ ಠಾಣೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಓರ್ವ ವ್ಯಕ್ತಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆರೋಪಿಯು ವಿನೋತ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಪ್ರಕರಣದ ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಈ ಪ್ರಕರಣದ ಹಿಂದಿರುವ ಪಿತೂರಿ ಹಾಗು ಸತ್ಯ ಸಂಗತಿ ಎನ್‌ಐಎ ತನಿಖೆಯಿಂದ ಮಾತ್ರ ಹೊರಬರಲು ಸಾಧ್ಯ ಎಂದು ಅವರು ಹೇಳಿದ್ದಾರೆ.