ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಲಡಾಖ್‌ನಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ನಿರ್ಮಿಸಲು ಒಪ್ಪಿಗೆ ನೀಡಿದೆ.
ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್, ಲಡಾಖ್‌ನಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಮುಂದಿನ 4 ವರ್ಷದಲ್ಲಿ ನಿರ್ಮಾಣ ಕಾರ್ಯ ಮುಕ್ತಾಯವಾಗಲಿದೆ. ಅದಕ್ಕಾಗಿ 750 ಕೋಟಿ. ರೂ ವ್ಯಯ ಮಾಡಲು ಇಂದಿನ ಕ್ಯಾಬಿನೆಟ್ನಲ್ಲಿ ನಿರ್ಧರಿಸಲಾಗಿದ್ದು ಅನುಮೋದನೆ ಸಿಕ್ಕಿದೆ ಎಂದರು. ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭ ಮಾಡುವುದರಿಂದ ಲಡಾಖ್‌ನಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ಸಿಗಲಿದೆ ಎಂದು ಅವರು ತಿಳಿಸಿದರು.
ಕೇಂದ್ರಾಡಳಿತ ಪ್ರದೇಶ ಲಡಾಖ್ನ ಸರ್ವಾಂಗೀಣ ಅಭಿವೃದ್ಧಿಗೆ ನಾವು ಸಿದ್ಧರಾಗಿದ್ದು, ಹಂತಹಂತವಾಗಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಮುಂದಿನ ಐದು ವರ್ಷಗಳಲ್ಲಿ 6,322 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಉಕ್ಕಿನ ಉತ್ಪಾದನಾ ಘಟಕ(ಪಿಎಲ್ಐ) ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ ಎಂದರು. ಕಂಪನಿ ಕಾಯ್ದೆಯ ಅಡಿ ಬಹುಪಯೋಗಿ ಮೂಲಸೌಕರ್ಯ ಕಾರ್ಪೊರೇಷನ್ ಸ್ಥಾಪನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದ್ದು, ಕಚ್ಚಾ ಉಕ್ಕು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲಿಯೇ 2ನೇ ಸ್ಥಾನದಲ್ಲಿದೆ. 6,322 ಕೋಟಿ ರೂ ವೆಚ್ಚದಲ್ಲಿ ಉಕ್ಕಿನ ಉತ್ಪಾದನೆ ಆಧಾರಿತ ಪ್ರೋತ್ಸಾಹಧನ ನೀಡಲಾಗುವುದು ಎಂದರು.
ಇದನ್ನೂ ಓದಿ: ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ: ಬಿ.ಎಸ್.ಯಡಿಯೂರಪ್ಪ
ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ಬ್ರಾಡ್ಬ್ಯಾಂಡ್ ನೀಡುವ ಬಗ್ಗೆ ಇಂದಿನ ಸಚಿವ ಸಂಪುಟದಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.