ನವದೆಹಲಿ/ಜೈಪುರ: ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಬದ್ಧತೆ ಮತ್ತು ನಾಯಕತ್ವಕ್ಕಾಗಿ ಮತ ಹಾಕಿದ್ದಾರೆ ಎಂದು ರಾಜಸ್ಥಾನದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಬಿಜೆಪಿ ಮುನ್ನಡೆ ಸಾಧಿಸಿದ ಬೆನ್ನಲ್ಲೇ, ಸಂತಸ ಹಂಚಿಕೊಂಡಿದ್ದಾರೆ.
ಬಿಜೆಪಿ ಮೂರು ರಾಜ್ಯಗಳಲ್ಲಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಮಧ್ಯಪ್ರದೇಶದಲ್ಲಿ 230 ಕ್ಷೇತ್ರಗಳ ಪೈಕಿ 158 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜಸ್ಥಾನದಲ್ಲಿ 199 ಕ್ಷೇತ್ರಗಳ ಪೈಕಿ 111 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಛತ್ತೀಸ್‌ಗಢದಲ್ಲಿ 90 ಕ್ಷೇತ್ರಗಳ ಪೈಕಿ 54 ಸ್ಥಾನಗಳಲ್ಲಿ ಮುಂದಿದೆ. ಜೆಪಿ ನಡ್ಡಾ ನೇತೃತ್ವದ ಪಕ್ಷವು ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡರೆ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ನಿಂದ ಅಧಿಕಾರವನ್ನು ಕಸಿದುಕೊಂಡಿದೆ.
ಮೋದಿ ನಾಯಕತ್ವಕ್ಕೆ ಮತ: ಈ ಬಗ್ಗೆ ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜಸ್ಥಾನ ಉಸ್ತುವಾರಿ ಪ್ರಹ್ಲಾದ್ ಜೋಶಿ ಮಾತನಾಡಿ, "ಜನರು ಬಿಜೆಪಿ, ಸಕಾರಾತ್ಮಕ ಬದ್ಧತೆ ಮತ್ತು ಪ್ರಧಾನಿ (ನರೇಂದ್ರ ಮೋದಿಯವರ)ಯ ನಾಯಕತ್ವಕ್ಕೆ ಮತ ಹಾಕಿದ್ದಾರೆ. ಮತದಾರರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ" ಎಂದು ತಿಳಿಸಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ:ರಾಜ್ಯದ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮತ್ತು ಸಂಸದೀಯ ವ್ಯವಹಾರ - ಕಲ್ಲಿದ್ದಲು ಮತ್ತು ಗಣಿ ಸಚಿವರಾಗಿರುವ ಜೋಶಿ, "ಬೋಗಸ್ ಭರವಸೆ" ನೀಡಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷವನ್ನು ಮತದಾರರು ದೂರವಿಟ್ಟಿದ್ದಾರೆ ಎಂದು ತಿಳಿಸಿದರು.