ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 2017ರ ಚುನಾವಣೆಗಿಂತಲೂ ಹೆಚ್ಚಿನ ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳುತ್ತದೆ ಎಂದು ಉತ್ತರ ಪ್ರದೇಶ ಡಿಸಿಎಂ ಮತ್ತು ಬಿಜೆಪಿ ಹಿರಿಯ ನಾಯಕ ಕೇಶವ್ ಪ್ರಸಾದ್ ಮೌರ್ಯ ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರಪ್ರದೇಶದಲ್ಲಿ ಈಗಾಗಲೇ ಎರಡು ಹಂತದ ಚುನಾವಣೆಗೆ ಮತದಾನ ಮುಗಿದಿದೆ. ಮೂರನೇ ಹಂತದ ಚುನಾವಣೆಗೆ ಎಲ್ಲಾ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿಸಿಕೊಂಡಿವೆ. ಈ ಸಂದರ್ಭದಲ್ಲಿ ಈಟಿವಿ ಭಾರತ ಜೊತೆಗಿನ ವಿಶೇಷ ಸಂವಾದದಲ್ಲಿ ಮಾತನಾಡಿದ ಕೇಶವ ಪ್ರಸಾದ್ ಮೌರ್ಯ, ಬಿಜೆಪಿ ಡಬಲ್ ಎಂಜಿನ್ ಸರ್ಕಾರ. 'ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಿ ಸುರಕ್ಷಾ' ನೀತಿಯ ಅಡಿಯಲ್ಲಿ ಕೆಲಸ ಮಾಡುತ್ತಿದೆ. ಕೊರೊನಾ ಸಮಯದಲ್ಲಿ ಬಡವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
ಇದೇ ವೇಳೆ, ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ಹರಿಹಾಯ್ದ ಅವರು, 2014ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಎಲ್ಲಾ ಸ್ಥಾನಗಳನ್ನು ಗೆದ್ದು ಕೇಂದ್ರದಲ್ಲಿ ಸರ್ಕಾರ ರಚಿಸುವ ಬಗ್ಗೆ ಅಖಿಲೇಶ್ ಕನಸು ಹೊಂದಿದ್ದರು. ಆದರೆ ಮತದಾರರು ಅವರ ಕನಸನ್ನು ನುಚ್ಚುನೂರು ಮಾಡಿದ್ದಾರೆ. 2017ರ ವಿಧಾನಸಭಾ ಚುನಾವಣೆಯಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಅವರು ಹೇಳಿಕೊಂಡರು. ಆದರೆ 47 ಕ್ಷೇತ್ರಗಳನ್ನು ಗೆಲ್ಲಲಷ್ಟೇ ಸಾಧ್ಯವಾಯಿತು. 2019ರ ಲೋಕ ಚುನಾವಣೆಯಲ್ಲಿ ನರೇಂದ್ರ ಮೋದಿಯ ವಿಜಯಯಾತ್ರೆಯನ್ನು ತಡೆಯಲು ವಿಪಕ್ಷಗಳು ಒಂದಾಗಿದ್ದವು. ಆದರೂ ಬಿಜೆಪಿ ಭರ್ಜರಿ ಜಯಗಳಿಸಿತು ಎಂದು ಹೇಳಿದರು.