ಲಖನೌ(ಉತ್ತರ ಪ್ರದೇಶ):ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ. ಒಟ್ಟು 403 ವಿಧಾನಸಭೆ ಕ್ಷೇತ್ರಗಳ ಪೈಕಿ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಘೋಷಣೆ ಮಾಡಿದ್ದು, ಈ ಪೈಕಿ ಶೇ. 40ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ.
ಉತ್ತರ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಪ್ರಮುಖವಾಗಿ, ಕೈ ಪಕ್ಷ 2017ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ದೇವಿಗೆ ಟಿಕೆಟ್ ನೀಡಿದೆ. 125 ಅಭ್ಯರ್ಥಿಗಳ ಪೈಕಿ 50 ಕ್ಷೇತ್ರಗಳಲ್ಲಿ ಮಹಿಳೆಯರು ಸ್ಪರ್ಧಿಸಲಿದ್ದು, ಶೇ. 40ರಷ್ಟು ಯುವಕರಿಗೂ ಮಣೆ ಹಾಕಿದೆ.
ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಿರುವ ಎಲ್ಲ ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದು, ಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯಕ್ಕೆ ನಾಂದಿ ಹಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.