ಪಿಲಿಭಿತ್ (ಉತ್ತರ ಪ್ರದೇಶ):ಇಲ್ಲಿನ ಸಿತಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಭಯಾನಕ ರಸ್ತೆ ಅಪಘಾತವೊಂದು ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರಲ್ಲಿ ಎಳೆಯ ಮಗುವೂ ಸೇರಿದೆ. ಘಟನೆಯ ವಿಷಯ ತಿಳಿದು ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಗಾಯಗೊಂಡ ಎಲ್ಲರೂ ಕೂಡಾ ಲಕ್ನೋದದವರಾಗಿದ್ದಾರೆ.
ಸೆರ್ಹಾಮೌ ನಾರ್ತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಭಾನುವಾರ ಮುಂಜಾನೆ ಲಕ್ನೋ ಕಡೆಯಿಂದ ಫಿಲಿಭಿತ್ ಕಡೆಗೆ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಪಿಕ್ಅಪ್ಗೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರಿನ ಮೇಲ್ಭಾಗ ಹಾರಿಹೋಗಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಸೇರಿ ನಾಲ್ವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆ ಅಪಘಾತದ ಬಗ್ಗೆ ಮಾಹಿತಿ ತಿಳಿದುಬರುತ್ತಿದ್ದಂತೆ ಸ್ಥಳೀಯ ಜನರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ನಂತರ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆಂಬ್ಯುಲೆನ್ಸ್ ಮೂಲಕ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಮೃತಪಟ್ಟ ಓರ್ವ ಪುರುಷ ಹಾಗೂ ಮೂವರು ಮಹಿಳೆಯರ ಮೃತದೇಹವನ್ನು ವಶಕ್ಕೆ ತೆಗೆದುಕೊಂಡು ನಂತರ ಪೋಸ್ಟ್ ಮಾರ್ಟಮ್ಗಾಗಿ ಜಿಲ್ಲಾ ಹೆಡ್ಕ್ವಾರ್ಟರ್ಗೆ ಕಳುಹಿಸಿದ್ದಾರೆ. ಕಾರು ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಲಕ್ನೋ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.