ಗೋರಖ್ಪುರ(ಉತ್ತರ ಪ್ರದೇಶ):ಉತ್ತರ ಪ್ರದೇಶ 403 ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಇದೇ ತಿಂಗಳ 10ರಂದು ಮೊದಲ ಹಂತದ ಮತದಾನ ನಡೆಯಲಿದೆ. ಹೀಗಾಗಿ ಅನೇಕ ಪಕ್ಷಗಳು ನಾಮಪತ್ರ ಸಲ್ಲಿಕೆ ಮಾಡ್ತಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಉತ್ತರ ಪ್ರದೇಶದ ಗೋರಖ್ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಮೂಲಕ ಮೊದಲ ಸಲ ವಿಧಾನಸಭೆ ಚುನಾವಣಾ ಕಣಕ್ಕಿಳಿದಿದ್ದಾರೆ. ಈಗಾಗಲೇ ಗೋರಖ್ಪುರ ಸಂಸದೀಯ ಕ್ಷೇತ್ರದಿಂದ ಐದು ಸಲ ಸಂಸದರಾಗಿ ಆಯ್ಕೆಯಾಗಿರುವ ಯೋಗಿ, ಇದೇ ಮೊದಲ ಸಲ ಶಾಸಕ ಸ್ಥಾನಕ್ಕಾಗಿ ಸ್ಪರ್ಧೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮುಂಚಿತವಾಗಿ ಗೋರಖನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡಿದ ಅವರು, ಹೋಮ-ಹವನದಲ್ಲಿ ಭಾಗಿಯಾದರು. ನಾಮಪತ್ರ ಸಲ್ಲಿಕೆ ಮಾಡಲು ಜಿಲ್ಲಾಧಿಕಾರಿ ಕಚೇರಿಗೆ ತೆರಳುವುದಕ್ಕೂ ಮುಂಚಿತವಾಗಿ ಮಾತನಾಡಿದ ಯೋಗಿ ಆದಿತ್ಯನಾಥ್ 300 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡುವ ಇರಾದೆ ವ್ಯಕ್ತಪಡಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರೊಂದಿಗೆ ಗೃಹ ಸಚಿವ ಅಮಿತ್ ಶಾ ಸಹ ಸಾಥ್ ನೀಡಿದರು.