ಚೆನ್ನೈ (ತಮಿಳುನಾಡು):ತಮಿಳುನಾಡಿನಲ್ಲಿ ನಡೆದ 30 ವರ್ಷಗಳ ಹಿಂದಿನ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಆದಿವಾಸಿಗಳ ಮೇಲೆ ದಬ್ಬಾಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 215 ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದ ಕೆಳ ನ್ಯಾಯಾಲಯದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ಎತ್ತಿ ಹಿಡಿದಿದೆ.
1992ರಲ್ಲಿ ಧರ್ಮಪುರಿ ಜಿಲ್ಲೆಯ ವಚಾತಿ ಗ್ರಾಮದಲ್ಲಿ ಶ್ರೀಗಂಧ ಮರಗಳ ಕಳ್ಳಸಾಗಣೆ ಸಂದರ್ಭದಲ್ಲಿ ನಡೆದ ದಾಳಿ ವೇಳೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಆದಿವಾಸಿಗಳ ಮೇಲೆ ದಬ್ಬಾಳಿಕೆ ಕುರಿತಂತೆ 215 ಮಂದಿಯನ್ನು ತಪ್ಪಿತಸ್ಥರು ಎಂದು ಧರ್ಮಪುರಿಯ ಕೆಳ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅಲ್ಲದೇ, ಅಪರಾಧಿಗಳಿಗೆ 1 ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿತ್ತು. ಆದರೆ, ಮೇಲ್ಮನವಿಗಳನ್ನು ಉಚ್ಛ ನ್ಯಾಯಾಲಯವು ವಜಾಗೊಳಿಸಿದೆ.
ನ್ಯಾಯಮೂರ್ತಿ ಪಿ.ವೇಲ್ಮುರುಗನ್, ಈ ಘಟನೆಯ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ 18 ಮಹಿಳೆಯರಿಗೆ ತಕ್ಷಣವೇ ತಲಾ 10 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡುವಂತೆ ಆದೇಶಿಸಿದ್ದಾರೆ. ಈ ಮೊತ್ತದಲ್ಲಿ ಅತ್ಯಾಚಾರದ ಆರೋಪಿಗಳು ಐದು ಲಕ್ಷ ರೂಪಾಯಿ ವಸೂಲಿ ಮಾಡುವಂತೆ ನ್ಯಾಯಾಲಯ ಸೂಚಿಸಿದೆ ಎಂದು ಸಂತ್ರಸ್ತರ ಪರ ವಕೀಲರು ತಿಳಿಸಿದ್ದಾರೆ.