ಶ್ರೀನಗರ:ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ರಿಷಿಪೋರಾ ಪ್ರದೇಶದಲ್ಲಿ ಶುಕ್ರವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಕಮಾಂಡರ್ ಹೆಚ್.ಎಂ ನಿಸಾರ್ ಖಾಂಡೆ ಹತನಾಗಿದ್ದಾನೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಆರಂಭಿಕ ಗುಂಡಿನ ಚಕಮಕಿಯಲ್ಲಿ ಮೂವರು ಸೇನಾ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಒಂದು ಎಕೆ 47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ವಲಯ ಇನ್‌ಸ್ಪೆಕ್ಟರ್ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದಲ್ಲಿ ಸರಣಿ ಭಯೋತ್ಪಾದನಾ - ವಿರೋಧಿ ಕಾರ್ಯಾಚರಣೆ ನಡೆಯುತ್ತಿದೆ. ಇದರಲ್ಲಿ ಅನೇಕ ಭಯೋತ್ಪಾದಕರು ಮತ್ತು ಅವರ ಕಮಾಂಡರ್‌ಗಳನ್ನು ಹೊಡೆದುರುಳಿಸಲಾಗಿದೆ. ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಹೆಚ್ಚಿನ ಕಾರ್ಯಾಚರಣೆಗಳನ್ನು ಪೊಲೀಸರು ಮತ್ತು ಸೇನೆ ಜಂಟಿಯಾಗಿ ನಡೆಸಿವೆ.
ವೆರಿನಾಗ್ ಎನ್‌ಕೌಂಟರ್‌ನಲ್ಲಿ ಉಗ್ರನ ಹತ್ಯೆ:ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕಪ್ರಾನ್ ವೆರಿನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಎನ್‌ಕೌಂಟರ್‌ನಲ್ಲಿ ಒಬ್ಬ ಯೋಧ ಮತ್ತು ನಾಗರಿಕ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ.