ಗಾಂಧಿನಗರ(ಗುಜರಾತ್): ಕರ್ನಾಟಕದ ಬಳಿಕ ಪ್ರಧಾನಿ ನರೇಂದ್ರ ಮೋದಿ ನಾಡು ಗುಜರಾತ್ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಆನಂದಿ ಬೆನ್ ನಂತರ ಗುಜರಾತ್ನಲ್ಲಿ 5 ವರ್ಷಗಳ ಕಾಲ ಯಶಸ್ವಿಯಾಗಿ ಆಡಳಿತ ನಡೆಸಿರುವ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ರೂಪಾನಿ ಇದೀಗ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದಾರೆ.
2022ರಲ್ಲಿ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದಕ್ಕೆ ಕೆಲ ತಿಂಗಳು ಮಾತ್ರ ಬಾಕಿ ಇರುವಾಗ ಗುಜರಾತ್ನಲ್ಲಿ ಈ ಬೆಳವಣಿಗೆ ನಡೆದಿರುವುದು ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
61 ವರ್ಷದ ರೂಪಾನಿ, ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಸರ್ಕಾರ ನಡೆಸಲು ಸಾಧ್ಯವಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬಂದು ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಸಹ ಗಂಭೀರವಾಗಿ ಕೇಳಿ ಬರಲು ಶುರುವಾಗಿವೆ.
ಇದನ್ನೂ ಓದಿರಿ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಜಯ್ ರೂಪಾನಿ...ಕಾರಣ?
ಆಡಳಿತ ಪಕ್ಷದಲ್ಲಿ ರೂಪಾನಿ ಬಗ್ಗೆ ಅಸಮಾಧಾನ
ಕಳೆದ ಕೆಲ ತಿಂಗಳಿಂದ ಮುಖ್ಯಮಂತ್ರಿ ವಿಜಯ್ ರೂಪಾನಿ ಆಡಳಿತ ವೈಖರಿ ಬಗ್ಗೆ ಸ್ವಪಕ್ಷೀಯರ ಶಾಸಕರಲ್ಲಿ ಅಸಮಾಧಾನ ಉಂಟಾಗಿತ್ತು ಎಂಬ ಮಾತು ಕೇಳಿ ಬಂದಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ರೂಪಾನಿ ಬಗ್ಗೆ ದೂರು ನೀಡಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಂತೆ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ.
ಎಎಪಿ, ಪಟೇಲ್ ಸಮುದಾಯದ ಪ್ರಾಬಲ್ಯ
ಗುಜರಾತ್ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಪ್ರಬಲ ನಾಯಕನನ್ನ ಸಿಎಂ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಉದ್ದೇಶದಿಂದ ಬಿಜೆಪಿ ಹೈಕಮಾಂಡ್ ರೂಪಾನಿ ಅವರಿಂದ ರಾಜೀನಾಮೆ ಪಡೆದುಕೊಂಡಿದೆ ಎನ್ನಲಾಗಿದೆ.