ಕೋಲ್ಕತ್ತಾ(ಪಶ್ಚಿಮ ಬಂಗಾಳ): ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮರು ಆಯ್ಕೆಯಾಗಿದ್ದಾರೆ. ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಅವರನ್ನ ಮತ್ತೊಂದು ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಕ್ಷದ ಚುನಾವಣೆಗಳಲ್ಲಿ ಟಿಎಂಸಿ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿಯನ್ನು ರಚನೆ ಮಾಡಲಾಯಿತು.
ಪಕ್ಷದ ಅಧ್ಯಕ್ಷೆಯಾಗಿ ಮತ್ತೊಂದು ಅವಧಿಗೆ ಆಯ್ಕೆಯಾಗುತ್ತಿದ್ದಂತೆ ಮಾಧ್ಯಮಗೋಷ್ಟಿಯಲ್ಲಿ ಭಾಗಿಯಾಗಿ ಮಾತನಾಡಿರುವ ಮಮತಾ ಬ್ಯಾನರ್ಜಿ, 2024ರ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಉತ್ತರ ಪ್ರದೇಶದಿಂದ ಸ್ಪರ್ಧೆ ಮಾಡಲಿದೆ ಎಂದರು. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿರುದ್ಧ ಹೋರಾಡಲು ಎಲ್ಲ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು ಎಂದು ಕರೆ ನೀಡಿರುವ ದೀದಿ, ಎಲ್ಲರೂ ಒಂದಾಗಿ ಹೋರಾಡಿದಾಗ ಮಾತ್ರ ಬಿಜೆಪಿ ಸೋಲಿಸಲು ಸಾಧ್ಯ ಎಂದರು. ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದಾಗಿ ಪ್ರತಿಜ್ಞೆ ಮಾಡಿದರು.