ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ಇದುವರೆಗೆ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲ. ಈ ನಡುವೆ ಮಲ್ಲಿಕಾರ್ಜುನ ಖರ್ಗೆ ಕೂಡ ಅಧ್ಯಕ್ಷ ಸ್ಥಾನದ ರೇಸ್ಗೆ ಸೇರ್ಪಡೆಯಾಗಿದ್ದಾರೆ. ಆದರೆ ಈ ರೇಸ್ನಲ್ಲಿ ಮುಂಚೂಣಿಯಲ್ಲಿದ್ದ ದಿಗ್ವಿಜಯ್ ಸಿಂಗ್ ಅಧ್ಯಕ್ಷ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಈ ರೇಸ್ನಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಉಳಿದಿದ್ದು, ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ.
ಕಾಂಗ್ರೆಸ್ ಅಧ್ಯಕ್ಷ ರೇಸ್ನಲ್ಲಿ ಮನೀಷ್ ತಿವಾರಿ:ಇದೇ ವೇಳೆ ಜಿ-23 ಗುಂಪಿನಿಂದ ಪ್ರತ್ಯೇಕ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಚರ್ಚೆಯೂ ಆರಂಭವಾಗಿದೆ. ಮನೀಷ್ ತಿವಾರಿ ಈಗಾಗಲೇ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಈ ರೇಸ್ನಿಂದ ಹೊರಗಿಟ್ಟಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಸಂಸದ ಶಶಿ ತರೂರ್ ರಾಜ್ ಘಾಟ್ ತಲುಪಿದರು. ಇಲ್ಲಿ ಅವರು ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇಂದು ಮಧ್ಯಾಹ್ನ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅಥವಾ ಇನ್ನಾವುದೇ ದಲಿತ ಮುಖವನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಮಾಡಬಹುದು ಎಂದು ಮೂಲಗಳು ಹೇಳುತ್ತವೆ.
ಖರ್ಗೆ ಬಗ್ಗೆ ಸೋನಿಯಾ ಅಂತಿಮ ನಿರ್ಧಾರ: ಮಲ್ಲಿಕಾರ್ಜುನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಕುರಿತು ಸೋನಿಯಾ ಗಾಂಧಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಖರ್ಗೆ ಅವರು 8 ಬಾರಿ ಶಾಸಕರಾಗಿ, ಎರಡು ಬಾರಿ ಲೋಕಸಭೆ ಮತ್ತು ಒಂದು ಬಾರಿ ರಾಜ್ಯಸಭಾ ಸಂಸದರಾಗಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಾತ್ರ ಸೋತಿದ್ದಾರೆ.
ಖರ್ಗೆ ದಲಿತ ನಾಯಕ, ಅವರು ಕರ್ನಾಟಕದ ಮಾಜಿ ರಾಜ್ಯಾಧ್ಯಕ್ಷರು ಮತ್ತು ಕೇಂದ್ರ ಸಚಿವರೂ ಆಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವ ಎಲ್ಲ ಸಾಧ್ಯತೆಗಳಿವೆ. ಗುರುವಾರ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸದಿರುವುದು ಮತ್ತು ಸಂಬಂಧಿತ ಬೆಳವಣಿಗೆಗಳಿಗಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗುರುವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿದರು. ಬಳಿಕ ಪಕ್ಷದ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿದರು.
ಸೋನಿಯಾ ಗಾಂಧಿಯನ್ನು ಭೇಟಿಯಾದ ರಾಜಸ್ಥಾನ ನಾಯಕರು:ಸೋನಿಯಾ ಗಾಂಧಿ ಅವರ ನಿವಾಸ '10 ಜನಪಥ್'ದಲ್ಲಿ ಭೇಟಿಯಾದ ನಂತರ ಗೆಹ್ಲೋಟ್ ಅವರು ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ. ನಾನು ಮುಖ್ಯಮಂತ್ರಿಯಾಗಿ ಮುಂದುವರಿಯುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ನಿರ್ಧರಿಸುತ್ತಾರೆ ಎಂದು ಹೇಳಿದರು.
ಸೋನಿಯಾ ಗಾಂಧಿಯವರೊಂದಿಗೆ ಗೆಹ್ಲೋಟ್ ಭೇಟಿಯಾದ ಕೆಲವೇ ಗಂಟೆಗಳ ನಂತರ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡ ಭೇಟಿಯಾದರು. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಪೈಲಟ್, ರಾಜಸ್ಥಾನದಲ್ಲಿನ ಬೆಳವಣಿಗೆಗಳ ಬಗ್ಗೆ ತಮ್ಮ ಭಾವನೆಗಳನ್ನು ಮತ್ತು ಪ್ರತಿಕ್ರಿಯೆಯನ್ನು ಕಾಂಗ್ರೆಸ್ ಅಧ್ಯಕ್ಷರಿಗೆ ತಿಳಿಸಿದ್ದೇನೆ. ಈ ವೇಳೆ ಸೋನಿಯಾ ಗಾಂಧಿ ಸಕಾರಾತ್ಮಕ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳೋದ್ದೇನು:ರಾಜಸ್ಥಾನಕ್ಕೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮುಖ್ಯಮಂತ್ರಿ ಕುರಿತು ಸೋನಿಯಾ ಗಾಂಧಿ ಇನ್ನೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.