ನವದೆಹಲಿ:2021ರ ಸಂಸತ್ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಪ್ರತಿಪಕ್ಷಗಳ ಸದಸ್ಯರು ಗದ್ದಲದ ನಡುವೆ ಲೋಕಸಭೆಯಲ್ಲಿ 'ಕೃಷಿ ಕಾನೂನುಗಳ ರದ್ದತಿ ಮಸೂದೆ 2021'ಯನ್ನು ಅಂಗೀಕರಿಸಲಾಗಿದೆ.
ಕಾಂಗ್ರೆಸ್ ಪ್ರತಿಭಟನೆ
ಸಂಸತ್ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಡಿಸೆಂಬರ್ 23ಕ್ಕೆ ಮುಕ್ತಾಯಗೊಳ್ಳಲಿದೆ. ಪ್ರತಿಪಕ್ಷಗಳ ಸದಸ್ಯರು ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪ ಮುಂದೂಡಿಕೆಯಾಗುತ್ತಿದ್ದಂತೆಯೇ ಪಾರ್ಲಿಮೆಂಟ್ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಇತರ ಕೈ ನಾಯಕರು ಕೃಷಿ ಕಾನೂನುಗಳನ್ನು ಕೂಡಲೇ ಹಿಂಪಡೆಯುವಂತೆ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ನಾಯಕರ ಪ್ರತಿಭಟನೆ
ನವೆಂಬರ್ 19 ರಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಅಧಿವೇಶನದ ವೇಳೆ ಎಲ್ಲ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಹೇಳಿದ್ದರು.
ಇದನ್ನೂ ಓದಿ: 3 ಕೃಷಿ ಕಾನೂನುಗಳ ರದ್ದು: ಟೀಕೆಗೆ ಗುರಿಯಾದ 'ಉದ್ದೇಶ ಮತ್ತು ಕಾರಣಗಳ ಹೇಳಿಕೆ'
'ಕೃಷಿ ಕಾನೂನುಗಳ ರದ್ದತಿ ಮಸೂದೆ' ಅಂಗೀಕಾರ
ಬೆಳಗ್ಗೆ ಲೋಕಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಘೋಷಣೆ ಕೂಗಿದ ಹಿನ್ನೆಲೆ ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿತ್ತು. 12 ಗಂಟೆಯ ಬಳಿಕ ಲೋಕಸಭಾ ಕಲಾಪ ಆರಂಭವಾಗಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು 'ಕೃಷಿ ಕಾನೂನುಗಳ ರದ್ದತಿ ಮಸೂದೆ 2021'ಯನ್ನು ಮಂಡಿಸಿದ್ದು, ಇದನ್ನು ಲೋಕಸಭೆ ಅಂಗೀಕರಿಸಿದೆ. ಆದರೆ, ಯಾವುದೇ ಚರ್ಚೆ ನಡೆಸದೇ ಮಸೂದೆ ಅಂಗೀಕರಿಸಿದ್ದಕ್ಕೆ ಮತ್ತೆ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದ ಕಾರಣ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.