ನವದೆಹಲಿ:ಸಂಸದ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ್ದು, ದೆಹಲಿಯಲ್ಲಿ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಚೇರಿ ಹೊರಭಾಗ ಪಕ್ಷದ ಬೆಂಬಲಿಗರು ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಕಿಡಿಕಾರಿದರು. ಪ್ರತಿಭಟನೆ ಅತಿರೇಕಕ್ಕೆ ಹೋಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದರು.
ಪೊಲೀಸರು ವಶಕ್ಕೆ ಪಡೆಯಲು ಬಂದಾಗ ಓಟಕಿತ್ತ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ: ವಿಡಿಯೋ - ರಾಹುಲ್ ಗಾಂಧಿ
ಪೊಲೀಸರಿಂದ ತಪ್ಪಿಸಿಕೊಳ್ಳಲು ಎದ್ನೋ ಬಿದ್ನೋ ಎಂಬಂತೆ ಓಟಕ್ಕಿತ್ತಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಮಧ್ಯೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸುತ್ತಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ.ಅವರನ್ನು ಸಹ ಪೊಲೀಸರು ವಶಕ್ಕೆ ಪಡೆಯಲು ಬರುತ್ತಿದ್ದರು. ಆದರೆ, ವಶಕ್ಕೆ ಪಡೆಯುತ್ತಿದ್ದಂತೆ ಶ್ರೀನಿವಾಸ್ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಅವರು ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ವಿಡಿಯೋ ಜಾಲತಾಣದಲ್ಲಿ ಓಡಾಡುತ್ತಿದೆ.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶ್ರೀನಿವಾಸ್, ಪೊಲೀಸರೂ ಸೇರಿದಂತೆ ಯಾವುದೇ ಕಾರಣಕ್ಕೂ ನಾವು ಯಾರಿಗೂ ಹೆದರುವುದಿಲ್ಲ ಎಂದಿದ್ದರು. ಅಲ್ಲದೇ ತಮ್ಮ ನಾಯಕನಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.