ಮಂಗಳೂರು: ನಗರದ ಕಾರಾಗೃಹದೊಳಗೆ ಇಂದು ನಡೆದಿರುವ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿ ವಿಚಾರಣಾಧೀನ ಕೈದಿಗಳನ್ನು ಬೆಳಗಾವಿ, ಧಾರವಾಡ ಹಾಗೂ ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಲಾಗಿದೆ.
ಈ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬರ್ಕೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 307ರಂತೆ ಪ್ರಕರಣ ದಾಖಲಾಗಿದೆ.
ಅಲ್ಲದೆ ಕಾರಾಗೃಹ ಪೊಲೀಸ್ ಹಾಗೂ ಸಿವಿಲ್ ಪೊಲೀಸ್ ಮೇಲೆ ನಡೆಸಿರುವ ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆಯೂ ಎರಡು ಪ್ರತ್ಯೇಕ ಪ್ರಕರಣ ಕೂಡ ದಾಖಲಿಸಲಾಗಿದೆ.
ಹೆಚ್ಚಿನ ತನಿಖೆಗಾಗಿ ಹಲ್ಲೆ ನಡೆಸಿರುವ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ತಿಳಿಸಿದ್ದಾರೆ.
ಪ್ರಕರಣದ ವಿವರ :ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಸಮೀರ್ ಎಂಬಾತ ವಿಚಾರಣಾಧೀನ ಕೈದಿಗಳಾಗಿರುವ ಅನ್ಸಾರ್ ಹಾಗೂ ಜೈನುದ್ದೀನ್ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾನೆ.
ಈತ ಸ್ಟೀಲ್ ಚಮಚ ಹಾಗೂ ಇನ್ನಿತರ ಸಾಮಾಗ್ರಿಗಳಿಂದ ಹಲ್ಲೆ ನಡೆಸಿದ್ದು, ಅವರು ದೈಹಿಕವಾಗಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.