ಅಹಮದಾಬಾದ್:ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ನರೇಂದ್ರ ಮೋದಿ ತಮ್ಮ ತವರು ರಾಜ್ಯ ಗುಜರಾತ್ನಲ್ಲಿ ಮೊದಲ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ.
ದೇಶದ ಜನತೆಯ ಈ ದೊಡ್ಡ ಆದೇಶ ಜವಾಬ್ದಾರಿಯನ್ನು ಹೆಚ್ಚಿಸಿದೆ. ಇನ್ನು ಐದು ವರ್ಷದಲ್ಲಿ ಶ್ರೀಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ. ಇದರ ಜೊತೆಯಲ್ಲಿ ವಿಶ್ವಮಟ್ಟದಲ್ಲಿ ಭಾರತವನ್ನು ಉನ್ನತ ಹಂತಕ್ಕೆ ಕೊಂಡೊಯ್ಯುವ ಕಾರ್ಯವೂ ನಮ್ಮ ಮೇಲಿದೆ ಎಂದು ಮೋದಿ ಗುಜರಾತ್ನ ಅಹಮದಾಬಾದ್ನಲ್ಲಿ ತಿಳಿಸಿದ್ದಾರೆ.
ಮೋದಿ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಗುಜರಾತ್ ಸಿಎಂ ವಿಜಯ್ ರೂಪಾಣಿ ಸ್ವಾಗತಿಸಿದರು. ಬಳಿಕ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಗುಜರಾತ್ ಸಿಎಂ ವಿಜಯ್ ರೂಪಾಣಿ ಕಾರಿನಲ್ಲಿ ವೇದಿಕೆಗೆ ತೆರಳಿದರು. ಈ ವೇಳೆ ಮಾರ್ಗದ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನೆರೆದಿದ್ದರು.
ಸಾರ್ವಜನಿಕ ಭಾಷಣದ ಬಳಿಕ ನರೇಂದ್ರ ಮೋದಿ ತಮ್ಮ ತಾಯಿ ಹೀರಾಬೆನ್ರನ್ನು ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಮೋದಿ ತಮ್ಮ ತಾಯಿಯನ್ನು ಭೇಟಿ ಮಾಡಿದ್ದಾರೆ.
2014ರಲ್ಲಿ ಬಿಜೆಪಿ ಗುಜರಾತ್ನಲ್ಲಿ ಎಲ್ಲ 26 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ ಆ ಎಲ್ಲ ಕ್ಷೇತ್ರಗಳನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಸಫಲವಾಗಿದೆ.