ನವದೆಹಲಿ:ಮಹಾಫಲಿತಾಂಶದ ಮತಎಣಿಕೆ ಕಾರ್ಯ ಆರಂಭವಾಗಿ ಒಂದು ಗಂಟೆಯಾಗಿದ್ದು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಆರಂಭಿಕ ಹಂತದಲ್ಲಿ 248 ಕ್ಷೇತ್ರದಲ್ಲಿ ಭರ್ಜರಿ ಮುನ್ನಡೆ ಪಡೆದಿದೆ. ಯುಪಿಎ 75 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದರೆ, ಇತರರು 66 ಕ್ಷೇತ್ರದಲ್ಲಿ ಮುಂದಿದ್ದಾರೆ.
ಹೈವೋಲ್ಟೇಜ್ ಕ್ಷೇತ್ರಗಳಾದ ಅಮೇಠಿಯಲ್ಲಿ ರಾಹುಲ್ ಗಾಂಧಿ ಹಾಗೂ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ಹಿನ್ನಡೆ ಅನುಭವಿಸಿದ್ದಾರೆ. ವಾರಾಣಾಸಿ ಕ್ಷೇತ್ರದಲ್ಲಿ ನರೇಂದ್ರ ಮೋದಿ ಮುನ್ನಡೆ ಸಾಧಿಸಿದ್ದಾರೆ. ಇನ್ನುಳಿದಂತೆ ನಾಗ್ಪುರದಲ್ಲಿ ನಿತಿನ್ ಗಡ್ಕರಿ, ವಯನಾಡಿನಲ್ಲಿ ರಾಹುಲ್ ಗಾಂಧಿ ಮುನ್ನಡೆಯಲ್ಲಿದ್ದಾರೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿ ಮುನ್ನುಗ್ಗುತ್ತಿದೆ. ಪ್ರಮುಖ ರಾಜ್ಯ ಉತ್ತರ ಪ್ರದೇಶದ 45 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಪಡೆದಿದೆ.
ಕರ್ನಾಟಕದಲ್ಲಿ ಬಿಜೆಪಿ 21 ಕ್ಷೇತ್ರದಲ್ಲಿ ಆರಂಭಿಕ ಹಂತದಲ್ಲಿ ಮುನ್ನಡೆ ಪಡೆದಿದೆ. ಮೈತ್ರಿ ಸರ್ಕಾರದ ಅಭ್ಯರ್ಥಿಗಳು 5 ಕ್ಷೇತ್ರದಲ್ಲಿ ಮುಂದಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಆರಂಭಿಕ ಹಂತದಲ್ಲಿ ಮುನ್ನಡೆ ಸಾಧಿಸಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ. ಎಂ. ಸಿದ್ದೇಶ್ವರ್, ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿಗೆ ಮುನ್ನಡೆ ಸಾಧಿಸಿದ್ದಾರೆ. ಉತ್ತರ ಕನ್ನಡ ಕ್ಷೇತ್ರದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮುನ್ನಡೆ ಕಾಯ್ದುಕೊಂಡ್ರೆ ಕಲಬುರ್ಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹಿನ್ನಡೆ ಅನುಭವಿಸುತ್ತಿದ್ದಾರೆ.