ಅಹಮದಾಬಾದ್:ಮುಂಗಾರು ಆರಂಭದ ವೇಳೆಯಲ್ಲೇ ಚಂಡಮಾರುತ ಕಾಣಿಸಿಕೊಂಡಿದ್ದು, ಪರಿಣಾಮ ದೇಶದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
’ವಾಯು’ ಚಂಡಮಾರುತ ಗುರುವಾರ ಮುಂಜಾನೆ ಗುಜರಾತ್ ಕರಾವಳಿಗೆ ಅಪ್ಪಳಿಸಲಿದ್ದು ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮೂರು ಲಕ್ಷ ಮಂದಿಯನ್ನು ಸ್ಥಳಾಂತರಿಸಲು ಉದ್ದೇಶಿಸಲಾಗಿದೆ. ಚಂಡಮಾರುತದ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತುರ್ತು ಸಭೆಯಲ್ಲಿ ಸ್ಥಳಾಂತರದ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದ್ದು, ಕರಾವಳಿ ತೀರ ಪ್ರದೇಶದಲ್ಲಿರುವ ಸುಮಾರು ಮೂರು ಲಕ್ಷ ಮಂದಿಯನ್ನು ಬುಧವಾರ ಮಧ್ಯಾಹ್ನದ ವೇಳೆಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶವಾಗಿರುವ ದಿಯು ನಲ್ಲೂ ಸಹ ಲಕ್ಷಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರ ಮಾಡಲಿದೆ. ಮಹಾನಗರಿ ಮುಂಬೈ ಬಾರಿ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.