ಬೆಂಗಳೂರು: ಶಾಲಾರಂಭದ ಕುರಿತು ಈಗಾಗಲೇ ಮಾರ್ಗಸೂತ್ರಗಳನ್ನು ಹೊರಡಿಸಲಾಗಿದೆ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗುತ್ತದೆ. ಆದ್ದರಿಂದ ಅಂತಹ ಜಿಲ್ಲೆಗಳ ಶಿಕ್ಷಕರು ಲಾಕ್ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಂಗಳವಾರದಿಂದ ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಣಿ ಪ್ರಾರಂಭಿಸಬೇಕು. ಆದರೆ ಕೆಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಬಹುದು. ಈ ಹಿನ್ನೆಲೆಯಲ್ಲಿ ಲಾಕ್ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮೊದಲ ಪಿಯು ಮೌಲ್ಯಾಂಕನ ಅವಧಿ ವಿಸ್ತರಣೆ:ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿ.ಯು.ಸಿ. ಮೌಲ್ಯಾಂಕನ ಪ್ರಕ್ರಿಯೆಯನ್ನು ಎಲ್ಲಾ ಜಿಲ್ಲೆಗಳ ಲಾಕ್ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ. ಈ ಕುರಿತಂತೆ ಪದವಿಪೂರ್ವ ಶಿಕ್ಷಕರಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ಅವರು ಕ್ರಮ ಜರುಗಿಸಲಿದ್ದಾರೆ ಎಂದು ಹೇಳಿದರು.
ಚೈಲ್ಡ್ ಪ್ರೊಫೈಲ್ ನಿಯಮಿತ ದಾಖಲೆ: ಈ ಬಾರಿ ನಿಗದಿತ ಅವಧಿಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಹೆಚ್ಚು ಸಮರ್ಥವಾಗಿ ಜಾರಿಯಲ್ಲಿಡುವ ಅವಶ್ಯಕತೆ ಇದೆ. ಪ್ರತಿ ಸೂಚಿತ ಅವಧಿಗೆ ವಿದ್ಯಾರ್ಥಿಗಳ ಚೈಲ್ಡ್ ಪ್ರೊಫೈಲ್ಗಳನ್ನು ನಿಯಮಿತವಾಗಿ ದಾಖಲಿಸುವ, ಕಲಿಕಾ ಸಾಮರ್ಥ್ಯಗಳನ್ನು ಅಳೆಯುವ ಮಾನದಂಡಗಳಾಗಿ ರೂಪಿಸುವ ಸದೃಢ ವ್ಯವಸ್ಥೆಯನ್ನು ಜಾರಿಯಲ್ಲಿಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಅತ್ಯವಶ್ಯಕವಾಗಿದ್ದು, ಇಂಥಹ ಸಂದರ್ಭದಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಮಂಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.