ಬೆಂಗಳೂರು: ಕೊರೊನಾಘಾತಕ್ಕೆ ಹೈರಾಣಾಗಿರುವ ಕರ್ನಾಟಕವನ್ನು ಈಗ ಪ್ರವಾಹ ಕಾಡತೊಡಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜ್ಯದ ಜನತೆ ತೀವ್ರ ಕಂಗಾಲಾಗಿದ್ದಾರೆ. ಹೀಗಾಗಿ, ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ.
ಅತಿವೃಷ್ಟಿಯಿಂದ ನಲುಗಿರುವ ಜನ ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆಗೆ ನಿಲ್ಲುತ್ತೇವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದೇ ಸಮಯದಲ್ಲಿ ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ತಗುಲಿದೆ. ಅವರು ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಸಂದರ್ಭ ಬಂದಿದೆ. ಬಹುತೇಕ ರಾಜ್ಯದ ಎಲ್ಲ ಜಿಲ್ಲೆಗಳು ಮುಂಗಾರಿನ ಅಬ್ಬರದ ಭೀತಿಯಿಂದ ನಲುಗಿವೆ. ಆದ್ದರಿಂದ ಮುಖ್ಯಮಂತ್ರಿಗಳು ಮತ್ತು ಸಚಿವರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿ ನಿಭಾಯಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ.
ಅತಿವೃಷ್ಟಿಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ. ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿವೆ. ಜೊತೆಗೆ ಮನೆ - ಮಠ ಕಳೆದುಕೊಂಡವರಿಗೆ ತಡಮಾಡದೇ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.
ಸತತ ನೆರೆಯಿಂದ ಸಂತ್ರಸ್ತರಾಗಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ನೀಡಬೇಕು ಎಂದು ಮಾಧ್ಯಮಗಳ ಮುಖೇನ ಆಗ್ರಹಿಸುತ್ತೇನೆ. ಈ ಸಂಬಂಧ ರಾಜ್ಯ ಸರ್ಕಾರವು ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದ್ದಾರೆ.