ತುಮಕೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ₹525 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಚಾಲನೆ ನೀಡಿದರು.
ತುಮಕೂರಿನಲ್ಲಿ ಸ್ಮಾರ್ಟ್ ಸಿಟಿಗೆ ಚಾಲನೆ ನೀಡಿದ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ತುಮಕೂರು ಅಭಿವೃದ್ಧಿಗೆ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಸ್ಮಾರ್ಟ್ ಸಿಟಿ ಅಡಿಯಲ್ಲಿ ಕೂಲಂಕಷವಾಗಿ ಚರ್ಚಿಸಲಾಗಿದೆ. ರಸ್ತೆ, ನೀರು ಇಂತಹ ಮೂಲಸೌಲಭ್ಯಗಳ ಜತೆಗೆ ಟ್ರಾಫಿಕ್ ಸಿಗ್ನಲ್ ಹಾಗೂ ಆಸ್ಪತ್ರೆಗಳನ್ನೂ ಒಳಗೊಂಡಂತೆ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಫ್ಲೆಕ್ಸ್‌ನಲ್ಲಿ ಇಲ್ಲದಿದ್ದರಿಂದ ಗೊಂದಲವುಂಟಾಗಿತ್ತು ಎಂಬ ವಿಚಾರ ತಿಳಿದು ವಿಷಾದ ವ್ಯಕ್ತಪಡಿಸಿದರು. ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಸಿಬ್ಬಂದಿ, ಮಾನವ ಸಂಪನ್ಮೂಲಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದರು.
ರಾಜ್ಯದಲ್ಲಿ ಉತ್ತಮ ಸೇವೆ ನೀಡುತ್ತಿರುವ ಆಸ್ಪತ್ರೆಗಳಲ್ಲಿ ತುಮಕೂರು ಜಿಲ್ಲಾಸ್ಪತ್ರೆ ಮೊದಲ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ. ಅತ್ಯಂತ ವೇಗ ಹಾಗೂ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡುತ್ತಿರುವ ಏಕೈಕ ಆಸ್ಪತ್ರೆ ಇದಾಗಿದೆ. ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯಡಿ ಸುಮಾರು ₹4 ಕೋಟಿ ಆದಾಯವನ್ನು ತಂದುಕೊಟ್ಟಿರುವ ಆಸ್ಪತ್ರೆ ಇದಾಗಿದೆ.ಆದಾಯದ ಶೇ.30 ರಷ್ಟು ಹಣವನ್ನು ಯಶಸ್ವಿ ಚಿಕಿತ್ಸೆ ನೀಡಿದ ವೈದ್ಯ ಸಿಬ್ಬಂದಿಗೆ ಪ್ರೋತ್ಸಾಹ ಧನವಾಗಿ ನೀಡುವ ಯೋಜನೆಯನ್ನೂ ರೂಪಿಸಲಾಗುವುದು ಎಂದರು. ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.