ಯಾದಗಿರಿ:ತಾಲೂಕಿನ ಬಳಿಚಕ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು.
ಬಳಿಚಕ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿ ಜಲ ಮೂಲಗಳ ಪುನಶ್ಚೇತನಗೊಳಿಸಲು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಭಾಗಿತ್ವದಲ್ಲಿ ಅನಷ್ಠಾನಗೊಳಿಸುತ್ತಿರುವ ಅಂತರ್ಜಲ ಚೇತನ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಲಾಕ್‍ಡೌನ್ ಸಂಬಂಧ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿ ಗ್ರಾಮೀಣ ಪ್ರದೇಶದ ಬಡವರಿಗೆ ಉದ್ಯೋಗ ಕೊಡಲು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಮನರೇಗಾ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ 122 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಸುಮಾರು 28 ಸಾವಿರ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಂತರ್ಜಲ ಹೆಚ್ಚಳಕ್ಕಾಗಿ ಶ್ರೀ ಶ್ರೀ ರವಿಶಂಕರ ಗುರೂಜಿಯವರ ದಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ಅಂತರ್ಜಲ ಚೇತನ ಕಾಮಗಾರಿಗಳನ್ನು ಪ್ರಾರಂಭ ಮಾಡಲಾಗಿದೆ ಎಂದು ತಿಳಿಸಿದರು.