ಬಿಷ್ಕೆಕ್(ಕಿರ್ಗಿಸ್ತಾನ):ಎರಡು ದಿನಗಳ ಕಾಲ ಇಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ನರೇಂದ್ರ ಮೋದಿ 2ನೇ ಅವಧಿಗೆ ಆಯ್ಕೆಯಾದ ಬಳಿಕ ನಡೆಯುತ್ತಿರುವ ಮೊದಲ ದ್ವಿಪಕ್ಷೀಯ ಮಾತುಕತೆ ಇದಾಗಿದ್ದು, ಬಹಳಷ್ಟು ಮಹತ್ವ ಪಡೆದುಕೊಂಡಿತ್ತು. ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ವಾಣಿಜ್ಯ ಬಾಂಧವ್ಯ ಮತ್ತಷ್ಟು ವೃದ್ಧಿಗೊಳಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಾಗಿದೆ. ಇದರ ಮಧ್ಯೆ ರಷ್ಯಾ ಅಧ್ಯಕ್ಷರೊಂದಿಗೂ ನಮೋ ಮಾತುಕತೆ ನಡೆಸಿದರು.
ಇಂದಿನ ದ್ವಿಪಕ್ಷೀಯ ಮಾತುಕತೆ ವೇಳೆ ಉಭಯ ದೇಶಗಳ ನಡುವೆ ಸಹಕಾರ ಹಾಗೂ ವಾಣಿಜ್ಯ ವ್ಯಾಪಾರ ವೃದ್ಧಿ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇದೇ ವರ್ಷ ಭಾರತಕ್ಕೆ ಭೇಟಿ ನೀಡುವಂತೆ ಚೀನಾ ಅಧ್ಯಕ್ಷರಿಗೆ ಮೋದಿ ಆಹ್ವಾನ ನೀಡಿದ್ದಾರೆ. ಇದೇ ವೇಳೆ ಭಯೋತ್ಪಾದಕ ಮಸೂದ್ ಅಜರ್ ಕುರಿತಾಗಿ ಸಹ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. ಪಾಕ್ ಭಯೋತ್ಪಾದನೆ ನಿಲ್ಲಿಸುವವರೆಗೂ ಯಾವುದೇ ರೀತಿಯ ಶಾಂತಿ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಮೋದಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಗೆಲುವು ದಾಖಲು ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಈ ಹಿಂದೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅಭಿನಂದನೆ ಸಲ್ಲಿಕೆ ಮಾಡಿದ್ದರು, ಇದೀಗ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.