ರಾಯಚೂರು:ಉದ್ಯೋಗ ಬಯಸುವ ಕೂಲಿ ಕಾರ್ಮಿಕರಿಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎಂಜಿನೇರಗಾ) ಅಡಿ ಅಗತ್ಯಕ್ಕೆ ಅನುಗುಣವಾಗಿ ಉದ್ಯೋಗ ಒದಗಿಸುವಂತೆ ಜಿಲ್ಲಾ ಪಂಚಾಯತಿ ಸಿಇಒ ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ತಾಲೂಕು ಪಂಚಾಯತಿಗಳ ಕಾರ್ಯ ನಿರ್ವಹಣಾಧಿಕಾರಿಗಳ ಹಾಗೂ ಅಧಿಕಾರಿಗಳ ಮಾಸಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಹೊರ ಹೋಗಿದ್ದ ಗುಳೆ ಕಾರ್ಮಿಕರು ಜಿಲ್ಲೆಗೆ ಮರಳಿದ್ದು, ನರೇಗಾ ಯೋಜನೆಯಡಿ ಅವರಿಗೆ ಜಾಬ್ ಕಾರ್ಡ್ ಹಾಗೂ ಕೂಲಿ ಕೆಲಸವನ್ನು ಆದ್ಯತೆ ಮೇರೆಗೆ ಒದಗಿಸಬೇಕು. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ತಾಲೂಕು ಪಂಚಾಯತಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೈಗೊಳ್ಳುವ ನಾನಾ ಕಾಮಗಾರಿಗಳಲ್ಲಿ ಹೆಚ್ಚು ಕೂಲಿಕಾರರಿಗೆ ಉದ್ಯೋಗ ದೊರೆಯಬೇಕು. ಎಂಜಿನರೇಗಾದ ಅನುಷ್ಠಾನದಲ್ಲಿ ಜಿಲ್ಲೆ ಈಗಾಗಲೇ ಉತ್ತಮ ಸಾಧನೆ ಮಾಡಿದ್ದು, ವೈಯಕ್ತಿಕ ಕಾಮಗಾರಿಗಳನ್ನು ನಿರ್ವಹಿಸಲು ಯೋಜನೆಯಡಿ ನೀಡಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಕೈಗೊಂಡಿರುವ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಹಾಗೂ ನರೇಗಾ ಯೋಜನೆಯಡಿ ಹೆಚ್ಚು ಉದ್ಯೋಗ ಸೃಷ್ಠಿಸುವ ಕಾಮಗಾರಿಗಳಿಗೆ ಆದ್ಯತೆ ನೀಡಿ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲೆಯ ತಾಲೂಕು ಪಂಚಾಯತಿಗಳ ಕಾರ್ಯ ನಿರ್ವಹಣಾಧಿಕಾರಿಗಳು, ನಾನಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.