ಬೆಂಗಳೂರು:ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಕ್ಲಸ್ಟರ್ ಅಭಿವೃದ್ಧಿಪಡಿಸಿ, ಸ್ಥಳೀಯ ಎಲೆಕ್ಟ್ರಿಕ್ ವೆಹಿಕಲ್ ಮೋಟಾರು ತಯಾರಿಕೆಗೆ ಆದ್ಯತೆ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ಇಂದು ಉದ್ಯೋಗ ಭಾರತಿ ಮತ್ತು ರಾಷ್ಟ್ರೀಯ ಸಣ್ಣ ಕೈಗಾರಿಕಾ ನಿಗಮದ ಸಹಯೋಗದಲ್ಲಿ ಆಯೋಜಿಸಿದ್ದ "ಇ-ಮೊಬಿಲಿಟಿ ಮತ್ತು ಚಾರ್ಜಿಂಗ್ ಇನ್ಫ್ರಾಸ್ಟ್ರಕ್ಚರ್" ಕುರಿತು ಕಾರ್ಯಾಗಾರ ಮತ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳು ದುಬಾರಿ ಎಂಬ ಮಾತು ಇದೆ. ಏಕೆಂದರೆ ಎಲೆಕ್ಟ್ರಿಕ್ ವಾಹನ ಖರೀದಿಯ ವೆಚ್ಚದಲ್ಲಿ ಶೇ. 30ರಷ್ಟು ವೆಚ್ಚ ಎಲೆಕ್ಟ್ರಿಕ್ ಬ್ಯಾಟರಿಗೇ ತಗಲುತ್ತದೆ. ಈ ಮೊತ್ತದಲ್ಲಿ ಕಡಿತವಾದರೆ ಇವಿ ವಾಹನಗಳು ಸಹ ಅಗ್ಗದ ದರದಲ್ಲಿ ಲಭ್ಯವಾಗಲಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಲೆಕ್ಟ್ರಿಕ್ ಮೋಟಾರು ತಯಾರಿಕೆಯನ್ನು ಪ್ರಾರಂಭಿಸಲು ಆದ್ಯತೆ ನೀಡಲಾಗಿದೆ ಹಾಗೂ ಬ್ಯಾಟರಿ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಜೊತೆಗೆ ರಾಜ್ಯದಲ್ಲಿ ಇವಿ ಕ್ಲಸ್ಟರ್ ತೆರೆಯುವ ಪ್ರಕ್ರಿಯೆ ನಡೆಯುತ್ತಿದ್ದು, ಇದಕ್ಕಾಗಿ ಸರ್ಕಾರ ಪ್ರತ್ಯೇಕ ಅನುದಾನ ಮೀಸಲಿಟ್ಟಿದೆ ಎಂದು ವಿವರಿಸಿದರು.
ಭಾರತವು ವಿಶ್ವದಲ್ಲಿ ವಾಹನ ಉದ್ಯಮ, ಇ-ಮೊಬಿಲಿಟಿ ರೂಪಿಸುವಲ್ಲಿ ಪ್ರಮುಖ ಸ್ಥಾನ ಅಲಂಕರಿಸಿದೆ. ಅದರಲ್ಲೂ ಕರ್ನಾಟಕ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಅಳವಡಿಕೆಗೆ ಬೇಕಾದ ಸೂಕ್ತ ವಾತಾವರಣವನ್ನು ನಿರ್ಮಾಣ ಮಾಡಲಾಗುತ್ತಿದೆ. ಓಲಾ ಮೊಬಿಲಿಟಿ ಸಂಸ್ಥೆಯ ಸಹಯೋಗದೊಂದಿಗೆ ವಿಶ್ವ ಆರ್ಥಿಕ ವೇದಿಕೆ ಪ್ರಕಟಿಸಿದ ಇತ್ತೀಚಿನ ವರದಿಯ ಪ್ರಕಾರ, ಭಾರತವು ವಿಶ್ವದ ಅತಿದೊಡ್ಡ ವಿದ್ಯುತ್ ವಾಹನ (ಇವಿ) ಮಾರುಕಟ್ಟೆಯಾಗುವ ಸಾಮರ್ಥ್ಯವನ್ನು ಹೊಂದಿದೆ ಎಂಬ ಅಭಿಪ್ರಾಯ ಹೊರಹಾಕಿದೆ. ಎಲೆಕ್ಟ್ರಿಕ್ ಮೊಬಿಲಿಟಿ ಭವಿಷ್ಯ ರೂಪಿಸುವಲ್ಲಿ ಕರ್ನಾಟಕ ಮಹತ್ವದ ಪಾತ್ರ ವಹಿಸಲಿದೆ. ಪ್ರಸ್ತುತ ಬೆಂಗಳೂರು ನಗರ ಸುಮಾರು 9000 ಎಲೆಕ್ಟ್ರಿಕ್ ವಾಹನಗಳನ್ನು ಹೊಂದಿದೆ. ಮಹೀಂದ್ರಾ ಎಲೆಕ್ಟ್ರಿಕ್, ಅಥರ್ ಎನರ್ಜಿ, ಯೂಲೂ, ವೊಗೊ, ಎನ್‌ಡಿಎಸ್ ಇಕೋ ಮೋಟಾರ್ಸ್ ಮತ್ತು ಬೇರೆ ದೇಶದ ಅತಿದೊಡ್ಡ ಇವಿ ಕಂಪನಿಯು ಇಲ್ಲಿ ಮಾರುಕಟ್ಟೆ ಸೃಷ್ಟಿಸುತ್ತಿದೆ ಎಂದು ತಿಳಿಸಿದರು.