ಬೆಂಗಳೂರು: ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಸಮಯ ತಗ್ಗಿಸುವ ಹೊಸ 23.6 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, 10,000 ಕೋಟಿ ರೂ. ವೆಚ್ಚದ ಶಿರಾಡಿ ಸುರಂಗ ರಸ್ತೆ ಯೋಜನೆ ಅನುಷ್ಠಾನದ ಪ್ರಕ್ರಿಯೆ ಆರಂಭವಾಗಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಸುರಂಗ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಯೋಜನೆಯು ಕರ್ನಾಟಕಕ್ಕೆ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಇದು ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕೇಂದ್ರ ಸರ್ಕಾರ 1.16 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ: ಗಡ್ಕರಿ ಘೋಷಣೆ
ವ್ಯಾಪಾರ ಮತ್ತು ಆರ್ಥಿಕತೆಯ ಅನುಕೂಲಕ್ಕಾಗಿ ಬಂದರುಗಳಿಗೆ ಸುಗಮ ಸಂಪರ್ಕ ಕಲ್ಪಿಸಲು ಗೋವಾ ಗಡಿಯಿಂದ ಕೇರಳ ಗಡಿಯವರೆಗಿನ ನಾಲ್ಕು ಪಥಗಳ ರಸ್ತೆಯು, ಬೇಲೇಕೇರಿ, ಕಾರವಾರ ಮತ್ತು ಮಂಗಳೂರನ್ನು ಸಂಪರ್ಕಿಸಲಿದೆ. 278 ಕಿ.ಮೀ. ಉದ್ದದ ಈ ರಸ್ತೆ ಕಾಮಗಾರಿಯನ್ನು 3,443 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ ಎಂದು ಹೇಳಿದರು.
ರಸ್ತೆ ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಶಿರಾಡಿ ಘಾಟ್, ಎನ್‌ಎಚ್ -73 ರಲ್ಲಿ ಚಾರ್ಮಡಿ ಘಾಟ್ ಮತ್ತು ಎನ್‌ಎಚ್ -275 ರಲ್ಲಿ ಸಂಪಾಜೆ ಘಾಟ್ನಲ್ಲಿ ಬೆಟ್ಟದ ಇಳಿಜಾರುಗಳಲ್ಲಿ ರಕ್ಷಣಾತ್ಮಕ ಕ್ರಮಗಳನ್ನು ಒದಗಿಸುವ ಮೂಲಕ ಸುರಕ್ಷತೆಯನ್ನು ಸುಧಾರಿಸುವ 115 ಕೋಟಿ ರೂ. ವೆಚ್ಚದ 3 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.