ನವದೆಹಲಿ:ದೋಷಪೂರಿತ ನೀತಿಗಳಿಂದ ದೇಶದ ಆರ್ಥಿಕತೆ ಕುಸಿಯುತ್ತಿದೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರೋಪಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಭಾಗವಹಿಸಿದ ಡಾ. ಸಿಂಗ್, ಜಾಗತಿಕ ಆರ್ಥಿಕ ಹಿಂಜರಿತದ ಸಂದರ್ಭದಲ್ಲಿ ಕೇಂದ್ರದಲ್ಲಿ ಈ ಹಿಂದಿನ ಯುಪಿಎ ಸರ್ಕಾರ ತೆಗೆದುಕೊಂಡು ದೂರಗಾಮಿ ನೀತಿಗಳ ಬಗ್ಗೆ ಜನರಿಗೆ ತಿಳಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬೀದಿಗಿಳಿದು ಪ್ರಚಾರ ಮಾಡುವಂತೆ ಕರೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಾಜಿ ಪ್ರಧಾನಿಗಳ ಅಭಿಪ್ರಾಯವನ್ನು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಬೆಂಬಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿಂದೆಯೂ ಜಾಗತಿಕ ಆರ್ಥಿಕ ಹಿಂಜರಿತ ಸಂಭವಿಸಿದ್ದಾಗ ಯುಪಿಎ ಸರ್ಕಾರವು ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಯಿತು. ಆದರೆ, ಬಿಜೆಪಿಗೆ ಏಕೆ ಸಾಧ್ಯವಾಗುತ್ತಿಲ್ಲ. ಆರ್ಥಿಕತೆ ಕ್ಷೀಣಿಸಲು ಪ್ರಧಾನಿ ನರೇಂದ್ರ ಮೋದಿ ಅವರ ದೋಷಯುಕ್ತ ನೀತಿಗಳೇ ಕಾರಣ. ಇವುಗಳೇ ಸರ್ಕಾರಕ್ಕೆ ದೊಡ್ಡ ಸವಾಲಾಗಿವೆ ಎಂದು ಸಭೆಯಲ್ಲಿ ಒತ್ತಿ ಹೇಳಿದ್ದಾರೆ.
ಆರ್ಥಿಕ ಕುಸಿತದ ತಾಪದಿಂದಾಗಿ ಅನೇಕ ಕ್ಷೇತ್ರಗಳು ಸಂಕಷ್ಟಕ್ಕೆ ಒಳಗಾಗಿವೆ. ಜಿಡಿಪಿಯು ನಿರಂತರವಾಗಿ ಕುಸಿಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗಿದೆ ಎಂದು ಡಾ. ಮನಮೋಹನ್ ಸಿಂಗ್ ಪಕ್ಷದ ಮುಖಂಡರಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ.