ಬೆಂಗಳೂರು:ವಿಧಾನಸಭೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಗ್ರಾಮೀಣಾವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಗ್ರಾಮೀಣಾವೃದ್ಧಿ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ.
ಗ್ರಾಮ ಪಂಚಾಯಿತಿಗಳಿಗೆ ದೊರೆತಿದ್ದೇನು?: ಗ್ರಂಥಾಲಯಗಳು ಇಲ್ಲದೇ ಇರುವ 300 ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ಮೂಲಕ ಗ್ರಾಮೀಣ ಭಾಗದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಲಾಗಿದೆ. ಮೂರು ವರ್ಷಗಳಲ್ಲಿ 5,213 ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಘಟಕಗಳನ್ನು ನಿರ್ಮಿಸಲಾಗಿದೆ. ಉಳಿದ ಗ್ರಾಮ ಪಂಚಾಯಿತಿಗಳಲ್ಲಿ 2023ರ ಡಿಸೆಂಬರ್ ತಿಂಗಳೊಳಗೆ ಘಟಕಗಳನ್ನು ಸ್ಥಾಪಿಸಲಾಗುವುದು.
ಗ್ರಂಥ ಪಾಲಕರ ಗೌರವಧನ ಹೆಚ್ಚಳ:ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಗ್ರಂಥ ಪಾಲಕರ ಗೌರವಧನವನ್ನು 1000 ರೂ. ಹೆಚ್ಚಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು. 200 ಕೋಟಿ ರೂ. ವೆಚ್ಚದಲ್ಲಿ ಪ್ರತಿವರ್ಷ 2 ಸಾವಿರ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಈ ಮೂಲಕ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಪುನರುಜ್ಜೀವನಕ್ಕೆ ವಿಶೇಷ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಮೆಗಾ ಡೈರಿ ಸ್ಥಾಪನೆಗೆ ಅನುದಾನ:ರಾಜ್ಯದಲ್ಲಿ ಹಾಲು ಉತ್ಪಾದನೆ ಮತ್ತು ಹೈನುಗಾರಿಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಮೆಗಾ ಡೈರಿ ಸ್ಥಾಪನೆಗಾಗಿ ಅನುದಾನ ಒದಗಿಸಿದೆ. ಈ ಮೂಲಕ ಗ್ರಾಮೀಣ ಭಾಗಗಳಲ್ಲಿ ಹಾಲು ಉತ್ಪಾದನೆ ಮತ್ತು ಹೈನುಗಾರಿಕೆ ಪ್ರೋತ್ಸಾಹ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಉತ್ಪಾದನೆ ಹೆಚ್ಚಿಸಲು, ಬಳ್ಳಾರಿ ಜಿಲ್ಲೆಯಲ್ಲಿ ಪ್ರತಿದಿನ 2 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯದ ಮೆಗಾ ಡೈರಿಯನ್ನು 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುವುದು. ಜೊತೆಗೆ ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪಿಸಲು ಸರ್ಕಾರದಿಂದ 90 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ.