ನವದೆಹಲಿ:2024ರ ಋತುವಿನಲ್ಲಿ ಮಿಲ್ಲಿಂಗ್ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಪ್ರತಿ ಕ್ವಿಂಟಾಲ್ಗೆ 300 ರೂ.ಗಳಷ್ಟು ಮತ್ತು ಚೆಂಡು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ಗೆ 250 ರೂ.ಗಳಷ್ಟು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರಕಾರವು ಬುಧವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಈ ನಿರ್ಧಾರ ಕೈಗೊಂಡಿದೆ.
2024ರ ಋತುವಿನಲ್ಲಿ ಮಿಲ್ಲಿಂಗ್ ಕೊಬ್ಬರಿಯ ನ್ಯಾಯೋಚಿತ ಸರಾಸರಿ ಗುಣಮಟ್ಟದ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ಗೆ 11,160 ರೂ. ಮತ್ತು ಚೆಂಡು ಕೊಬ್ಬರಿಗೆ ಪ್ರತಿ ಕ್ವಿಂಟಾಲ್ಗೆ 12,000 ರೂ.ಗೆ ನಿಗದಿಪಡಿಸಲಾಗಿದೆ. ಇದು ಮಿಲ್ಲಿಂಗ್ ಕೊಬ್ಬರಿಗೆ ಶೇಕಡಾ 51.84 ಮತ್ತು ಚೆಂಡು ಕೊಬ್ಬರಿಗೆ ಶೇಕಡಾ 63.26ರಷ್ಟು ಲಾಭವನ್ನು ಖಾತರಿಪಡಿಸುತ್ತದೆ. ಇದು ಅಖಿಲ ಭಾರತ ತೂಕದ ಸರಾಸರಿ ಉತ್ಪಾದನಾ ವೆಚ್ಚಕ್ಕಿಂತ 1.5 ಪಟ್ಟು ಹೆಚ್ಚಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮಿಲ್ಲಿಂಗ್ ಕೊಬ್ಬರಿಯನ್ನು ಎಣ್ಣೆ ಉತ್ಪಾದನೆಗೆ ಮತ್ತು ಚೆಂಡು ಕೊಬ್ಬರಿಯನ್ನು ಆಹಾರ ಪದಾರ್ಥವಾಗಿ ಮತ್ತು ಧಾರ್ಮಿಕ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಕೇರಳ ಮತ್ತು ತಮಿಳುನಾಡು ಮಿಲ್ಲಿಂಗ್ ಕೊಬ್ಬರಿಯನ್ನು ಹೆಚ್ಚಾಗಿ ಉತ್ಪಾದಿಸುವ ಪ್ರಮುಖ ರಾಜ್ಯಗಳಾಗಿವೆ. ಕರ್ನಾಟಕದಲ್ಲಿ ಹೆಚ್ಚಾಗಿ ಚೆಂಡು ಕೊಬ್ಬರಿಯನ್ನು ಉತ್ಪಾದಿಸಲಾಗುತ್ತದೆ.
ಹೆಚ್ಚಿನ ಎಂಎಸ್ಪಿ ತೆಂಗು ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಾತ್ರಿಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತರರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.