ಬೆಳಗಾವಿ:ಕೊರೊನಾ ಸೋಂಕಿತನನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಕರೆತರಲು ಹೋದ ಆ್ಯಂಬುಲೆನ್ಸ್ ಚಾಲಕನ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ಆರೋಗ್ಯವಂತನಾಗಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಸೋಂಕಿತನ ಕುಟುಂಬಸ್ಥರು ಹಾಗೂ ಸ್ಥಳೀಯರು ಆ್ಯಂಬುಲೆನ್ಸ್ ಚಾಲಕ ಹಾಗೂ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಉದ್ಧಟತನ ಮೆರೆದಿದ್ದಾರೆ.
ಆ್ಯಂಬುಲೆನ್ಸ್ ಚಾಲಕ, ಸಿಬ್ಬಂದಿ ಮೇಲೆ ಹಲ್ಲೆ ನಂದಗಡ ಗ್ರಾಮದಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ರ‍್ಯಾಂಡಮ್ ಪರೀಕ್ಷೆ ಮಾಡಲಾಗಿತ್ತು. ಆ ವೇಳೆ, ಕೆಲವರಿಗೆ ಸೋಂಕು ದೃಢಪಟ್ಟಿದ್ದು, ಅಂತಹವರನ್ನು ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಲು ವೈದ್ಯಕೀಯ ಸಿಬ್ಬಂದಿ ನಂದಗಡಕ್ಕೆ ಹೋಗಿದ್ದಾರೆ. ವೈದ್ಯಕೀಯ ಸಿಬ್ಬಂದಿ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಒಂದೆಡೆ ಸೇರಿ ವಾಗ್ವಾದ ನಡೆಸಿದ್ದಾರೆ.
ಸ್ಥಳಕ್ಕಾಗಮಿಸಿದ ನಂದಗಡ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ನಂದಗಡ ಪೊಲೀಸ್ ಠಾಣೆಯಲ್ಲಿ ವೈದ್ಯಕೀಯ ಸಿಬ್ಬಂದಿ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.