ಅಥಣಿ: ಈ ಬಾರಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುತ್ತದೆಯಾ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಆದರೆ ಮನುಷ್ಯ ಅಂದ ಮೇಲೆ ಆಸೆ ಸಹಜವಾಗಿರುತ್ತದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಪರೋಕ್ಷವಾಗಿ ಸಚಿವ ಸ್ಥಾನದ ಮೇಲಿರುವ ಆಸೆಯನ್ನು ಹೊರಹಾಕಿದರು.
ಮನುಷ್ಯ ಅಂದ ಮೇಲೆ ಆಸೆ ಸಹಜ ಸ್ವಭಾವ: ಶಾಸಕ ಮಹೇಶ್ ಕುಮಟಳ್ಳಿ - CM Basavaraja Bommayi
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ವೇಳೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮಾತನಾಡಿ, ಈ ಬಾರಿ ಸಚಿವ ಸಂಪುಟ ವಿಸ್ತರಣೆಯಾಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದರೆ ಮನುಷ್ಯನಿಗೆ ಆಸೆ ಸಹಜ ಅಲ್ವಾ ಎಂದು ಪರೋಕ್ಷವಾಗಿ ಸಚಿವ ಸ್ಥಾನದ ಮೇಲಿರುವ ಆಸೆಯನ್ನು ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ನಾನು ಸಚಿವ ಸ್ಥಾನಕ್ಕೆ ಹೆಚ್ಚು ಒತ್ತು ನೀಡಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಅಥಣಿ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚುವರಿಯಾಗಿ 400 ಕೋಟಿ ರೂಪಾಯಿ ಬೇಕಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಥಣಿ ಕ್ಷೇತ್ರದ ಮೇಲೆ ಕಾಳಜಿಯಿಂದ ಹೆಚ್ಚಿನ ಅನುದಾನ ನೀಡಿದ್ದಾರೆ. ಆದರೂ ಇನ್ನೂ 400 ಕೋಟಿ ರೂಪಾಯಿ ಅನುದಾನ ಬೇಕಾಗಿದೆ. ರಾಜ್ಯ ಸರ್ಕಾರದ ಬಜೆಟ್ನಲ್ಲಿ ಸಿಎಂ ಬೊಮ್ಮಾಯಿ ಅವರು ಅಥಣಿಗೆ ಕೃಷಿ ವಿಶ್ವವಿದ್ಯಾಲಯಕ್ಕೆ ಅನುಮೋದನೆ ನೀಡಿದ್ದಾರೆ. ಅಥಣಿ ಜನತೆ ಪರವಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಥಣಿಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕನಸಾಗಿತ್ತು. ಗಡಿ ಭಾಗದಲ್ಲಿ ಈ ವಿಶ್ವವಿದ್ಯಾಲಯ ಮಂಜೂರು ಮಾಡಿರುವುದು ಸಂತೋಷವಾಗಿದೆ ಎಂದು ತಿಳಿಸಿದರು.
ಸಚಿವ ಸ್ಥಾನಕ್ಕಾಗಿ ನಾನು ಬೆನ್ನು ಹತ್ತಿಲ್ಲ. ಆದರೆ ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡರೂ ಆ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.