ಕರ್ನಾಟಕ

karnataka

By

Published : Dec 17, 2021, 5:34 PM IST

ETV Bharat / city

ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಲು ಸಮಿತಿ ರಚನೆ: ವರದಿ ಬಂದ್ಮೇಲೆ ಸೂಕ್ತ ನಿರ್ಧಾರ : ಸಚಿವ ಅಶ್ವತ್ಥ ನಾರಾಯಣ

ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಇದೇ ತಿಂಗಳ 15 ರಂದು ಸಮಿತಿ ರಚಿಸಿ ಅಧಿಸೂಚನೆ ಹೊರಡಿಸಿದ್ದೇವೆ. ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

Ashwathnarayan
ಸಚಿವ ಅಶ್ವತ್ಥ ನಾರಾಯಣ

ಬೆಳಗಾವಿ: ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಈ ಸಮಿತಿ ವರದಿ ಬಂದ ನಂತರ ಅತಿಥಿ ಉಪನ್ಯಾಸಕರ ಬೇಡಿಕೆಗಳ ಬಗ್ಗೆ ಸೂಕ್ತ ತೀರ್ಮಾನ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ವಿಧಾನ ಸಭೆಯಲ್ಲಿ ಇಂದು ಶೂನ್ಯ ವೇಳೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಶಾಸಕ ಲಿಂಗೇಶ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಇದೇ ತಿಂಗಳ 15 ರಂದು ಸಮಿತಿ ರಚಿಸಿ ಅಧಿಸೂಚನೆ ಹೊರಡಿಸಿದ್ದೇವೆ.

ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರನಾಯ್ಕ್ ಅಧ್ಯಕ್ಷತೆಯಲ್ಲಿ ಆರ್ಥಿಕ ಇಲಾಖೆ, ಶಿಕ್ಷಣ ಇಲಾಖೆ, ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾಲೇಜು ನಿರ್ದೇಶನಾಲಯದ ಆಯುಕ್ತರು ಈ ಸಮಿತಿಯ ಸದಸ್ಯರಾಗಿದ್ದು, ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಸಮಿತಿಯ ವರದಿ ಬಂದ ನಂತರ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಪರಿಹಾರ ಮತ್ತು ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ್ದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್‌ನ ಲಿಂಗೇಶ್‌, ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ 14 ಸಾವಿರ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಕೆಲವರು ಪಿಹೆಚ್‌ಡಿ ಸಹ ಪಡೆದಿದ್ದಾರೆ. ಇಂತಹ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ, ಐಐಟಿ ಮಟ್ಟಕ್ಕೆ ಯುವಿಸಿಇ, ವಿಟಿಯು: ಅಶ್ವತ್ಥ ನಾರಾಯಣ

ಅತಿಥಿ ಉಪನ್ಯಾಸಕರಿಗೆ 12 ತಿಂಗಳು ಪೂರ್ಣ ವೇತನ ನೀಡಬೇಕು. ಕಾಯಂ ಮಾಡಿದರೆ ಈ ಸಮಸ್ಯೆ ಬರುವುದಿಲ್ಲ. ಹಾಗಾಗಿ ದೆಹಲಿ ಮಾದರಿಯಲ್ಲೇ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿ. ಕೆಲವರು ನಿವೃತ್ತಿ ಅಂಚಿಗೆ ಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನಗಳು ನಡೆದಿವೆ. ಆದ್ದರಿಂದ ಸರ್ಕಾರ ಅತಿಥಿ ಉಪನ್ಯಾಸಕರ ಖಾಯಮಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

For All Latest Updates

TAGGED:

ABOUT THE AUTHOR

...view details